ಬೆಂಗಳೂರು,ಫೆ.15- ವಿಧಾನಪರಿಷತ್‍ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚುನಾವಣಾ ಸಿಬ್ಬಂದಿ ಇಂದು ಮಧ್ಯಾಹ್ನ ತಮ್ಮ ತಮ್ಮ ಮತಗಟ್ಟೆಗಳಿಗೆ ಮತಪೆಟ್ಟಿಗೆ, ಮತಪತ್ರ ಮೊದಲಾದ ಚುನಾವಣಾ ಸಾಮಗ್ರಿಗಳೊಂದಿಗೆ ತೆರಳಿದರು. ಮತದಾನವು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಲು ಅನುಕೂಲವಾಗುವಂತೆ ಪೊಲೀಸ್ ಬಿಗಿಭದ್ರತೆಯನ್ನೂ ಸಹ ಒದಗಿಸಲಾಗಿದೆ.
ನಾಳೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಚುನಾವಣಾ ಕಣದಲ್ಲಿ ಕಾಂಗ್ರೆಸ್‍ನಿಂದ ಮಾಜಿ ಉಪ ಸಭಾಪತಿ ಪುಟ್ಟಣ್ಣ, ಎನ್‍ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ ಸೇರಿದಂತೆ 9 ಅಭ್ಯರ್ಥಿಗಳಿದ್ದಾರೆ. ಪ್ರಾಶಸ್ತ್ಯದ ಮತವನ್ನು ಶಿಕ್ಷಕರು ಚಲಾಯಿಸಬೇಕಿದೆ. ಫೆ.20 ರಂದು ಮತ ಎಣಿಕೆ ಆರಂಭಗೊಳ್ಳಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಿಗೆ ಸೇರಿದ ನೋಂದಾಯಿತ ಶಿಕ್ಷಕರು ಮತದಾರರಾಗಿದ್ದಾರೆ. ಈ ಉಪ ಚುನಾವಣೆಗೆ ಸಂಬಂಧಿಸಿದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 43 ಮತಗಟ್ಟೆಗಳನ್ನು ತೆರೆಯಲಾಗಿದೆ.
BIG NEWS : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು
ಈ ಉಪ ಚುನಾವಣೆ ನಡೆಯುವ 3 ಜಿಲ್ಲೆಗಳ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳು ಅನುದಾನಿತ ಹಾಗೂ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಅರ್ಹ ಶಿಕ್ಷಕ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ನಾಳೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ರಾಜ್ಯಸರ್ಕಾರ ಆದೇಶಿಸಿದೆ.