ಬೆಂಗಳೂರು,ಜು.21- ನಕಲಿ 500 ರೂ. ಮುಖಬೆಲೆಯ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಕುಂಬಳಗೋಡು ಠಾಣೆಪೊಲೀಸರು ಭೇದಿಸಿದ್ದು, ಹೊರರಾಜ್ಯದ ವ್ಯಕ್ತಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 500 ರೂ. ಮುಖಬೆಲೆಯ 338 ನಕಲಿ ನೋಟುಗಳು, ಜೆರಾಕ್‌್ಸ ಯಂತ್ರ, ಲ್ಯಾಪ್‌ಟಾಪ್, ಕಾರು ಹಾಗೂ ಮೂರು ಮೊಬೈಲ್‌ಫೋನ್‌ಗಳು ಸೇರಿದಂತೆ 3.29 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ಜುಲೈ 3 ರಂದು ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿಯೊಬ್ಬ ನಕಲಿ ನೋಟುಗಳನ್ನು ಚಲಾವಣೆ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಯಿತು.
ಅದೇ ದಿನ ಕೆಂಚನಪುರ ಕ್ರಾಸ್ ಸಮೀಪ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತ ನಕಲಿ ನೋಟುಗಳನ್ನು ಮುದ್ರಿಸಿ ಚೆನ್ನೈನಲ್ಲಿದ್ದ ತನ್ನ ಸಹಚರನಿಗೆ ಮಾರಾಟ ಮಾಡುತ್ತಿರುವುದು ಗೊತ್ತಾಗಿದೆ.
ವಿಚಾರಣೆ ವೇಳೆ ಹೆಚ್ಚಿನ ಹಣಗಳಿಸುವ ಉದ್ದೇಶದಿಂದ ನಕಲಿ ನೋಟುಗಳನ್ನು ಮುದ್ರಿಸಿ ಮಾರಾಟ ಮಾಡುತ್ತಿದ್ದುದಾಗಿ ಆರೋಪಿಯು ಬಾಯ್ಬಿಟ್ಟಿದ್ದಾನೆ. ಈ ಮಾಹಿತಿಯ ಆಧಾರದ ಮೇಲೆ ಜುಲೈ 7ರಂದು ತಮಿಳುನಾಡಿನ ಚೆನ್ನೈನಲ್ಲಿ ಮತ್ತೊಬ್ಬ ಸಹಚರನನ್ನು ಬಂಧಿಸಲಾಗಿದೆ.
ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಜುಲೈ 4ರಿಂದ 8ರವರೆಗೆ ಬೆಂಗಳೂರು ಹಾಗೂ ಚೆನ್ನೈನಲ್ಲಿರುವ ಆರೋಪಿಗಳ ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿ ಈ ಅಕ್ರಮ ಜಾಲದಲ್ಲಿ ಬಳಸಲಾಗುತ್ತಿದ್ದ ವಸ್ತು ,ವಾಹನ ವಶಪಡಿಸಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಯನ್ನು ನೈಋತ್ಯ ವಿಭಾಗದ ಉಪ ಪೊಲೀಸ್ ಆಯುಕ್ತೆ ಅನಿತಾ ಬಿ. ಹದ್ದಣ್ಣವರ್ ಅವರ ಮಾರ್ಗದರ್ಶನದಲ್ಲಿ, ಕೆಂಗೇರಿ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಸತ್ಯವತಿ ಎಸ್. ಅವರ ನೇತೃತ್ವದಲ್ಲಿ, ಕುಂಬಳಗೋಡು ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಕುಮಾರ್ ಹಾಗೂ ಸಿಬ್ಬಂದಿಯ ತಂಡ ಯಶಸ್ವಿಯಾಗಿ ನಡೆಸಿದೆ.
