ಕನಕಪುರ,ಫೆ.17- ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ಕಾನ್ಸ್‍ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾರೊಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ ಜಿಲ್ಲೆ ಹಾರೊಹಳ್ಳಿ ತಾಲೂಕಿನ ದ್ಯಾವಸಂದ್ರದ ನಿವಾಸಿ ಮಂಜುಶ್ರೀ(27) ಆತ್ಮಹತ್ಯೆ ಮಾಡಿ ಕೊಂಡಿರುವ ಕಾನ್ಸ್‍ಟೇಬಲ್. ಬೆಂಗಳೂರಿನ ಮೈಕೊ ಲೇಔಟ್ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿ ಮಂಜುಶ್ರೀ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗಷ್ಟೆ ಶಿವಾಜಿನಗರ ಪೊಲೀಸ್ ಠಾಣೆಗೆ ಅವರನ್ನು ನಿಯೋಜಿಸಲಾಗಿತ್ತು.
ಪ್ರತಿದಿನ ದ್ಯಾವಸಂದ್ರದಿಂದ ಬೆಂಗಳೂರಿಗೆ ತೆರಳಿ ಕೆಲಸ ಮಾಡುತ್ತಿದ್ದ ಮಂಜುಶ್ರೀ ಅವರು ನಿನ್ನೆ ಎಂದಿನಂತೆ ಕರ್ತವ್ಯ ಮುಗಿಸಿಕೊಂಡು ರಾತ್ರಿ ಮನೆಗೆ ಬಂದಿದ್ದಾರೆ. ಇವರ ಪೋಷಕರು ಮನೆಯ ಹಿಂಭಾಗದಲ್ಲಿ ಕೆಲಸದಲ್ಲಿ ತೊಡಗಿದ್ದಾಗ ಮಂಜುಶ್ರೀ ರೂಂಗೆ ಹೋಗಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
ಮುಂದಿನ ಪೀಳಿಗೆಯ ಹೆಚ್-3 ರಾಕೆಟ್ ಉಡಾಯಿಸಿದ ಜಪಾನ್
ಕೆಲ ಸಮಯದ ಬಳಿಕ ಪೋಷಕರು ಮನೆಯೊಳಗೆ ಬಂದು ನೋಡಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಸುದ್ದಿ ತಿಳಿದು ಹಾರೊಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹಾರೊಹಳ್ಳಿ ಸರ್ಕಲ್ ಇನ್ಸ್‍ಪೆಕ್ಟರ್ ಕೃಷ್ಣಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ದಯಾನಂದ ಸಾಗರ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.