ಬೆಂಗಳೂರು,ಫೆ.17- ಲೋಕಸಭೆ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಇಂದಿನಿಂದ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಮಾವೇಶ ಆಯೋಜನೆಗೊಂಡಿದ್ದು, ಎರಡು ದಿನಗಳ ಕಾಲ ನಡೆಯುವ ಈ ಸಮಾವೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಲು ರಣತಂತ್ರ ರೂಪಿಸಲಾಗಿದೆ.
ಸಮೀಕ್ಷೆಗಳ ಪ್ರಕಾರ ನರೇಂದ್ರಮೋದಿ ಅವರು 3ನೇ ಬಾರಿ ಪ್ರಧಾನಿಯಾಗಲಿದ್ದಾರೆ ಎಂಬ ಹಿನ್ನಲೆಯಲ್ಲಿ ಎರಡು ದಿನಗಳ ಕಾರ್ಯಕಾರಿಣಿ ಸಭೆ ಮಹತ್ವ ಪಡೆದುಕೊಂಡಿದೆ. ಕರ್ನಾಟಕ ರಾಜ್ಯದಿಂದ 500ಕ್ಕೂ ಹೆಚ್ಚು ರಾಜ್ಯ ನಾಯಕರಿಗೆ ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡಿದ್ದಾರೆ.
ಮೋದಿ ಸರ್ಕಾರ ದೇಶದ ರೈತರಿಗೆ ಶಾಪವಾಗಿದೆ : ಖರ್ಗೆ
ದೆಹಲಿಯ ಪ್ರಗತಿ ಮೈದಾನದಲ್ಲಿ ಆರಂಭವಾಗಿರುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್, ಬಿಜೆಪಿ ಆಡಳಿತವಿರುವ ಉಖ್ಯಮಂತ್ರಿಗಳು, ಸಚಿವರು, ಸುಮಾರು 11 ಸಾವಿರಕ್ಕೂ ಹೆಚ್ಚು ಪದಾಧಿಕಾರಿಗಳು ಈ ಸಮಾವೇಶದಲ್ಲಿ ಭಾಗವಹಿಸಿದ್ದಾರೆ.
ಎರಡು ದಿನಗಳ ರಾಷ್ಟ್ರೀಯ ಸಮಾವೇಶದಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮತ್ತು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಮಹಿಳಾ ಮೀಸಲಾತಿ, ಕೇಂದ್ರ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಇಂತಹ ಪ್ರಮುಖ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಬಗ್ಗೆ ಮನವರಿಕೆ ಮಾಡಿಕೊಡುವ ಚರ್ಚೆ ನಡೆಯುತ್ತಿದೆ.
ಬಿಜೆಪಿ-ಜೆಡಿಎಸ್ ಮೈತ್ರಿಯೊಂದಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಎಲ್ಲ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಬಗ್ಗೆಯೂ ಕೂಡ ಮಹತ್ವದ ಚರ್ಚಿಸಲಾಗುತ್ತಿದೆ.
ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ವಿಕಸಿತ ಭಾರತ ಅಭಿಯಾನಕ್ಕೆ ಚಾಲನೆ ನೀಡಿದರು. ವಸ್ತುಪ್ರದರ್ಶನ ಆಯೋಜಿಸಿದ್ದು, ಇದರಲ್ಲಿ ಎನ್‍ಡಿಎ ಸರ್ಕಾರದ ಸಾಧನೆಗಳು ಅನಾವರಣಗೊಳಿಸಲಾಗಿದೆ.