ನವದೆಹಲಿ, ಜು.22- ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಕುರಿತು ತೀವ್ರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಬೇಕಾಗಿಲ್ಲ, ಬದಲಿಗೆ ಅವರಿಗೆ ರಾಜಕೀಯ ಸುದ್ದಿಗಳಲ್ಲಿ ಜಾಗ ಪಡೆಯುವುದಷ್ಟೇ ಮುಖ್ಯವಾಗಿದೆ ಎಂದು ನೇರ ಆರೋಪ ಮಾಡಿದ್ದಾರೆ.
ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿಷಯಾಧಾರಿತ ಚರ್ಚೆಗೆ ಸರ್ಕಾರ ಸಿದ್ಧವಾಗಿದ್ದರೂ, ಕಾಂಗ್ರೆಸ್ ನಾಯಕರು ವಿದ್ಯಾರ್ಥಿಗಳನ್ನು ರಾಜಕೀಯ ದಾಳವಾಗಿ ಬಳಸಿಕೊಂಡು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಪ್ರಧಾನ್ ತಮ ಖಾತೆಯಲ್ಲಿ ಟೀಕಿಸಿದ್ದಾರೆ.
ವಿಪಕ್ಷಗಳ ಆರೋಪಗಳಿಗೆ ಪ್ರತ್ಯುತ್ತರ ನೀಡಿರುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ವಿದ್ಯಾರ್ಥಿಗಳಿಗೆ ರಾಜಕೀಯ ಪ್ರಚಾರಕ್ಕಿಂತ ಪರೀಕ್ಷಾ ವ್ಯವಸ್ಥೆಯಲ್ಲಿ ಖಚಿತತೆ, ಜವಾಬ್ದಾರಿ ಮತ್ತು ನಿಖರ ಪರಿಹಾರಗಳು ಬೇಕಾಗಿವೆ. ಪ್ರಸ್ತುತ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲು, ಪಾರದರ್ಶಕತೆ ತರಲು ಹಾಗೂ ವಿದ್ಯಾರ್ಥಿಗಳ ನಿಜವಾದ ಕಾಳಜಿಗಳಿಗೆ ಸ್ಪಂದಿಸಲು ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ವಿದ್ಯಾರ್ಥಿಗಳ ಸಮಸ್ಯೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪ ಮಾಡಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಕಾಂಗ್ರೆಸ್ ಪಕ್ಷದ ನಡೆ ಪ್ರಜಾಪ್ರಭುತ್ವದ ಚರ್ಚೆಗೆ ವಿರುದ್ಧವಾಗಿದೆ ಎಂದು ಟೀಕಿಸಿದ್ದಾರೆ.ಮುಂಗಾರು ಅಧಿವೇಶನದಲ್ಲಿ ನೀಟ್ ಅಕ್ರಮ ಪ್ರಕರಣ ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ವಿಚಾರಗಳ ಬಗ್ಗೆ ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸಂಪೂರ್ಣ ಸಿದ್ಧವಿದೆ. ಆದರೆ, ಕಾಂಗ್ರೆಸ್ ಪಕ್ಷವು ಚರ್ಚೆಯ ಬದಲು ಪ್ರತಿಭಟನೆ ಮತ್ತು ರಾಜಕೀಯ ನಾಟಕಕ್ಕೆ ಆದ್ಯತೆ ನೀಡಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಕೇವಲ ಘೋಷಣೆಗಳು ಅಥವಾ ರಾಜಕೀಯ ಭಾಷಣಗಳು ಬೇಕಿಲ್ಲ. ಅವರಿಗೆ ನ್ಯಾಯ, ಪಾರದರ್ಶಕತೆ, ಶೈಕ್ಷಣಿಕ ಸುಧಾರಣೆ ಹಾಗೂ ಹೊಣೆಗಾರಿಕೆಯ ಆಡಳಿತ ಬೇಕು. ನಮ ಸರ್ಕಾರ ಈ ಎಲ್ಲಾ ವಿಷಯಗಳಲ್ಲಿ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ. ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಇದೇ ವೇಳೆ ಪ್ರಧಾನಿ ನಿವಾಸದ ಎದುರು ನಡೆಸಲಾದ ಪ್ರತಿಭಟನೆಯ ಬಗ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟುಮಾಡುವ ರೀತಿಯಲ್ಲಿ ಧರಣಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿರುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶವಿದ್ದರೂ, ಅದು ಕಾನೂನು ಮತ್ತು ಭದ್ರತಾ ನಿಯಮಗಳ ವ್ಯಾಪ್ತಿಯಲ್ಲಿಯೇ ನಡೆಯಬೇಕು ಎಂದು ಅವರು ಹೇಳಿದ್ದಾರೆ.
ಇನ್ನೊಂದೆಡೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟದ ನಾಯಕರು ಪ್ರತಿಭಟನೆ ನಡೆಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಪ್ರಧಾನಿ ನಿವಾಸದ ಕಡೆಗೆ ಮೆರವಣಿಗೆ ನಡೆಸಿ ಧರಣಿ ಕುಳಿತರು. ಪ್ರತಿಭಟನೆಯ ವೇಳೆ ಭದ್ರತಾ ಕಾರಣಗಳನ್ನು ಉಲ್ಲೇಖಿಸಿದ ದೆಹಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದರು.
ಘಟನೆ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಕಂಡುಬಂದಿದೆ. ಮುಂಬರುವ ದಿನಗಳಲ್ಲಿ ಈ ವಿಷಯ ಸಂಸತ್ತಿನಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗುವ ನಿರೀಕ್ಷೆಯಿದೆ.
ಅನುಮತಿಯಿಲ್ಲದೆ ಪ್ರಧಾನಿ ನಿವಾಸದ ಕಡೆಗೆ ತೆರಳಲು ಯತ್ನಿಸಿದ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದರು. ಧರಣಿ ನಿರತರಾಗಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಭದ್ರತಾ ಸಿಬ್ಬಂದಿ, ಬಸ್ಸ್‌ಗೆ ಕರೆದೊಯ್ದ ದೃಶ್ಯಗಳು ಕಂಡುಬಂದವು. ಕೆಲ ಗಂಟೆಗಳ ನಂತರ ಇವರನ್ನು ಬಿಡುಗಡೆ ಮಾಡಲಾಯಿತು.
ಬಿಡುಗಡೆಯಾದ ಬಳಿಕ ಮಾತನಾಡಿದ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ಮಾತನಾಡಲು ಅಥವಾ ಶಾಂತಿಯುತ ಪ್ರತಿಭಟನೆಗೆ ನಮಗೆ ಅನುಮತಿ ನೀಡುತ್ತಿಲ್ಲ. ಹೀಗಾಗಿ ನಾವು ನಿರೀಕ್ಷಿಸದ ಸ್ಥಳದಲ್ಲಿ ಪ್ರತಿಭಟನೆ ನಡೆಸಬೇಕಾಯಿತು ಎಂದು ತಮ ನಡೆಯನ್ನು ಸಮರ್ಥಿಸಿಕೊಂಡರು. ಪ್ರಧಾನಮಂತ್ರಿಯವರ ಅಧಿಕೃತ ನಿವಾಸದ ಹೊರಗೆ ನಡೆದ ಈ ಪ್ರತಿಭಟನೆಯನ್ನು ಕೇಂದ್ರ ಸರ್ಕಾರದ ಮೂಲಗಳು ತೀವ್ರವಾಗಿ ಖಂಡಿಸಿವೆ.
