Homeರಾಜ್ಯಮಾಜಿ ಸಚಿವ ಸಿ.ವೀರಣ್ಣ ನಿಧನ

ಮಾಜಿ ಸಚಿವ ಸಿ.ವೀರಣ್ಣ ನಿಧನ

ormer Minister C Veeranna passes away

ಕೊರಟಗೆರೆ,ಜು.25:- ರಾಜ್ಯ ರಾಜಕಾರಣದಲ್ಲಿ ತಮ್ಮ ಸರಳತೆ, ಆಡಳಿತ ದಕ್ಷತೆ ಹಾಗೂ ಪ್ರಾಮಾಣಿಕ ರಾಜಕಾರಣದ ಮೂಲಕ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದ ಮಾಜಿ ಸಚಿವರು ಹಾಗೂ ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕರಾದ ಸಿ.ವೀರಣ್ಣ (86) ಅವರು ಕಳೆದ ರಾತ್ರಿ ನಿಧನರಾಗಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಸ್ವಗ್ರಾಮಕ್ಕೆ ಕರೆತರಲಾಗಿತ್ತು. ರಾತ್ರಿ ಬುಕ್ಕಾಪಟ್ಟಣದ ತೋಟದಮನೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅವರ ನಿವಾಸಕ್ಕೆ ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಅಭಿಮಾನಿಗಳು, ಸಾರ್ವಜನಿಕರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.

2 ಬಾರಿ ಶಾಸಕರಾಗಿ ಆಯ್ಕೆ :
1940ರ ಏಪ್ರಿಲ್‌‍ 23ರಂದು ಜನಿಸಿದ ಸಿ. ವೀರಣ್ಣ ಅವರು ಜನತಾ ಪಕ್ಷದ ಅಭ್ಯರ್ಥಿಯಾಗಿ 1983 ಹಾಗೂ 1985ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಗ್ರಾಮೀಣ ಅಭಿವೃದ್ಧಿ, ರೈತರ ಸಮಸ್ಯೆಗಳ ಪರಿಹಾರ ಹಾಗೂ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ ಜನಪ್ರಿಯ ನಾಯಕರಾಗಿ ಹೊರಹೊಮಿದ್ದರು.
ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಸಚಿವ ಸಂಪುಟದಲ್ಲಿ ಸಿ. ವೀರಣ್ಣ ಅವರು ಸಣ್ಣ ಉಳಿತಾಯ, ಲಾಟರಿ, ಬಂದೀಖಾನೆ, ಸಾರಿಗೆ, ವಾಣಿಜ್ಯ ಹಾಗೂ ಕೈಗಾರಿಕೆ ಸೇರಿದಂತೆ ಹಲವು ಮಹತ್ವದ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು. ಆಡಳಿತದಲ್ಲಿ ಪಾರದರ್ಶಕತೆ ಮತ್ತು ಶಿಸ್ತು ಪಾಲನೆಗೆ ಅವರು ಹೆಸರಾಗಿದ್ದರು.

ಸಣ್ಣ ಉಳಿತಾಯದಲ್ಲಿ ಐತಿಹಾಸಿಕ ಸಾಧನೆ :
ಸಣ್ಣ ಉಳಿತಾಯ ಇಲಾಖೆಯ ಸಚಿವರಾಗಿದ್ದ ಅವಧಿಯಲ್ಲಿ ರಾಜ್ಯಾದ್ಯಂತ ಜನರಲ್ಲಿ ಉಳಿತಾಯದ ಬಗ್ಗೆ ಜಾಗೃತಿ ಮೂಡಿಸುವ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದರು. ಅವರ ನಾಯಕತ್ವದಲ್ಲಿ ಕರ್ನಾಟಕವು ಸಣ್ಣ ಉಳಿತಾಯ ಸಂಗ್ರಹಣೆಯಲ್ಲಿ ದೇಶದಲ್ಲೇ ಮೊದಲ ಸ್ಥಾನ ಗಳಿಸಿ ರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿತ್ತು. ಈ ಸಾಧನೆ ಅವರ ಆಡಳಿತ ಜೀವನದ ಪ್ರಮುಖ ಮೈಲಿಗಲ್ಲಾಗಿ ಪರಿಗಣಿಸಲಾಗಿದೆ.

ವಿಧಾನಸಭೆಯ ಉಪಸಭಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಅವರು ಸದನದ ಕಾರ್ಯ ನಿರ್ವಹಣೆಯಲ್ಲಿ ಪಕ್ಷಾತೀತ ನಿಲುವು ಹಾಗೂ ಸಂಸದೀಯ ಮೌಲ್ಯಗಳನ್ನು ಎತ್ತಿಹಿಡಿದಿದ್ದರು.

ಸರಳ ವ್ಯಕ್ತಿತ್ವ :
ರಾಜಕೀಯ ಜೀವನದಲ್ಲಿ ಸರಳತೆ, ಸಜ್ಜನಿಕೆ ಮತ್ತು ಪ್ರಾಮಾಣಿಕತೆಗೆ ಹೆಸರಾಗಿದ್ದ ಸಿ. ವೀರಣ್ಣ ಅವರು ಸಕ್ರಿಯ ರಾಜಕಾರಣದಿಂದ ದೂರವಾದ ಬಳಿಕ ಸಾರ್ವಜನಿಕ ಬದುಕಿನಲ್ಲಿ ಹೆಚ್ಚು ಕಾಣಿಸಿಕೊಳ್ಳದಿದ್ದರೂ, ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಹಲವು ಸಾಮಾಜಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯುವ ನಾಯಕರಿಗೆ ಮಾರ್ಗದರ್ಶನ ನೀಡುತ್ತಿದ್ದರು. ಅವರ ನಿಧನ ತಾಲೂಕಿಗೆ ತುಂಬಲಾರದ ನಷ್ಟವಾಗಿದೆ.

ರಾಜ್ಯಪಾಲ ಥಾವರ್‌‍ಚಂದ್‌‍ ಗೆಹ್ಲೋಟ್‌‍, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌‍, ಉಪಮುಖ್ಯಮಂತ್ರಿ ಡಾ ಜಿ.ಪರಮೇಶ್ವರ್‌‍, ಕೇಂದ್ರ ಸಚಿವರಾದ ಎಚ್‌‍.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌‍.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಸುಧಾಕರ್‌‍ ಲಾಲ್‌‍ ಸೇರಿದಂತೆ ಸಚಿವರು, ಶಾಸಕರು ಮತ್ತಿತರ ಗಣ್ಯರು ಸಿ.ವೀರಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

RELATED ARTICLES

Latest News