ಬೆಂಗಳೂರು,ಫೆ.22- ರಾಜ್ಯಸಭಾ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್‍ನ ಕುಪೇಂದ್ರ ರೆಡ್ಡಿ ಅವರನ್ನು ಗೆಲ್ಲಿಸುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿಯ ಮಹತ್ವದ ಶಾಸಕಾಂಗ ಸಭೆ ಸಂಜೆ ನಡೆಯಲಿದೆ. ಸಂಜೆ ಏಳು ಗಂಟೆಗೆ ಖಾಸಗಿ ಹೋಟೆಲ್‍ನಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಎಲ್ಲ ಶಾಸಕರ ಭಾಗವಹಿಸಬೇಕೆಂದು ಸೂಚಿಸಲಾಗಿದೆ. ಸಭೆಯಲ್ಲಿ ರಾಜ್ಯಸಭಾ ಚುನಾವಣೆಗೆ ಅನುಸರಿಸಬೇಕಾದ ಕಾರ್ಯತಂತ್ರಗಳು ಹಾಗೂ ಎನ್‍ಡಿಎ ಅಭ್ಯರ್ಥಿ ಗೆಲುವಿನ ಕುರಿತು ರಣತಂತ್ರ ರೂಪಿಸಲಾಗುತ್ತದೆ ಎನ್ನಲಾಗಿದೆ.
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಸಂಬಂಧ ಸಮಾಲೋಚನೆ ನಡೆಸಲಾಗುತ್ತದೆ. ಬಿಜೆಪಿ ಅಭ್ಯರ್ಥಿ ಗೆಲುವಿಗೆ ಬೇಕಾದ ಮತಗಳಿಗೂ ಹೆಚ್ಚಿನ ಮತಗಳನ್ನು ಪಕ್ಷ ಹೊಂದಿದೆ ಹೆಚ್ಚುವರಿ ಮತಗಳನ್ನು ಎನ್‍ಡಿಎ ಮೈತ್ರಿ ಅಭ್ಯರ್ಥಿಯಾಗಿ ಕಣದಲ್ಲಿರುವ ಜೆಡಿಎಸ್‍ನ ಕುಪೇಂದ್ರ ರೆಡ್ಡಿಗೆ ಹಾಕಬೇಕಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಕಾದ ಶಾಸಕರು ಮತ್ತು ಕುಪೇಂದ್ರ ರೆಡ್ಡಿಗೆ ಮತ ಹಾಕಬೇಕಾದ ಶಾಸಕರ ಪಟ್ಟಿಯನ್ನು ಸಿದ್ಧಪಡಿಸಿ ಶಾಸಕರಿಗೆ ವಿವರ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.
ಶಿಕ್ಷಕರ ಕ್ಷೇತ್ರದ ಗೆಲುವು ಲೋಕಸಭೆಗೆ ದಿಕ್ಸೂಚಿ : ಸಿಎಂ
ಈಗಾಗಲೇ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ಅಧಿಕೃತವಾಗಿ ಎನ್‍ಡಿಎ ಸೇರಿದೆ. ಬಿಜೆಪಿಯ ಹೆಚ್ಚುವರಿ ಮತಗಳ ಆಧಾರದಲ್ಲಿ ಬಿಜೆಪಿ ಹೈಕಮಾಂಡ್‍ನ ಸಮ್ಮತಿ ಪಡೆದು ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಹೀಗಾಗಿ ಬಿಜೆಪಿ ರಾಜ್ಯ ನಾಯಕರು ಜೆಡಿಎಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕಿದ್ದು, ಅದರಂತೆ ಕಾರ್ಯತಂತ್ರ ರೂಪಿಸುವ ಕುರಿತು ಇಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲಾಗುತ್ತದೆ.