ದೆಹಲಿ,ಫೆ.22- ಮುಂಬರುವ ಲೋಕಸಭೆ ಚುನಾವಣೆ ಹಾಗೂ ಪ್ರಸಕ್ತ ರಾಜ್ಯಸಭೆ ಚುನಾವಣೆ ಕಾರ್ಯತಂತ್ರ ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಇಂದು ಮಾತುಕತೆ ನಡೆಸಿದ್ದಾರೆ. ನವದೆಹಲಿ ನಿವಾಸದಲ್ಲಿ ಅಮಿತ್ ಷಾ ಕುಮಾರಸ್ವಾಮಿ ಭೇಟಿಯಾಗಿ ಸುಮಾರು ಅರ್ಧಗಂಟೆ ಕಾಲ ರಾಜ್ಯಸಭೆ ಚುನಾವಣೆ ಕಾರ್ಯತಂತ್ರ, ಲೋಕಸಭೆ ಚುನಾವಣೆ ಸಿದ್ಧತೆ, ಬಿಜೆಪಿ-ಜೆಡಿಎಸ್ ನಡುವೆ ಕ್ಷೇತ್ರಗಳ ಹಂಚಿಕೆ, ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ನಿನ್ನೆ ಸಂಜೆ ದೆಹಲಿಗೆ ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರೊಂದಿಗೆ ತೆರಳಿದ್ದ ಕುಮಾರಸ್ವಾಮಿಯವರು ಅಮಿತ್ ಷಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ವಿಧಾನಪರಿಷತ್‍ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಗೆ ಉಂಟಾಗಿರುವ ಸೋಲಿನ ಪರಾಮರ್ಶೆಯನ್ನು ಮಾಡಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಎನ್‍ಡಿಎ 2ನೇ ಅಭ್ಯರ್ಥಿ ಕುಪೇಂದ್ರರೆಡ್ಡಿಯವರ ಗೆಲುವಿನ ಸಾಧ್ಯಾಸಾಧ್ಯತೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ.
ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ : ಅಶೋಕ್ ಆಕ್ಷೇಪ
ಲೋಕಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ ಹಾಗೂ ಎನ್‍ಡಿಎ ಅಭ್ಯರ್ಥಿಗಳ ಆಯ್ಕೆ ಕುರಿತಂತೆಯೂ ಸಮಾಲೋಚನೆ ನಡೆಸಿದ್ದಾರೆ. ಅಲ್ಲದೆ ಪ್ರಚಲಿತ ರಾಜಕೀಯ ವಿದ್ಯಮಾನಗಳು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಎನ್‍ಡಿಎ ಅಭ್ಯರ್ಥಿಗಳು ಗೆಲ್ಲಲು ಬೇಕಾದ ಕಾರ್ಯತಂತ್ರ, ಚುನಾವಣೆ ಸಿದ್ಧತೆ ಕಾರ್ಯತಂತ್ರದ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ.
ಜೆಡಿಎಸ್‍ಗೆ ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಟ್ಟು ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆಯೂ ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.