ಬೆಂಗಳೂರು, ಫೆ.22- ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ 7ನೇ ವೇತನ ಆಯೋಗದ ವರದಿಯನ್ನು ಶೀಘ್ರವೇ ಜಾರಿಗೆ ತರಬೇಕು ಎಂದು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ವಿಧಾನಸಭೆಯಲ್ಲಿಂದು ಒತ್ತಾಯಿಸಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರ ರೂಪಿಸುವ ಯೋಜನೆಗಳನ್ನು ಜಾರಿಗೆ ತರುವುದೇ ಸರ್ಕಾರಿ ನೌಕರರು ಅವರನ್ನು ಚೆನ್ನಾಗಿ ನೋಡಿಕೊಂಡರೆ ಸರ್ಕಾರಕ್ಕೂ ಅನುಕೂಲವಾಗಲಿದೆ ಎಂದರು.
ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚಿನ ವೇತನ ದೊರೆಯುತ್ತಿದೆ. ಇದಕ್ಕೆ ಹೋಲಿಸಿದರೆ, ರಾಜ್ಯ ಸರ್ಕಾರಿ ನೌಕರರಿಗೆ ವೇತನದಲ್ಲಿ ತಾರತಮ್ಯವಾಗುತ್ತಿದೆ. ಇದನ್ನು ಸರಿಪಡಿಸಬೇಕು. ಮುಖ್ಯಮಂತ್ರಿಗಳು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ವೇತನ ಆಯೋಗದ ವರದಿ ಜಾರಿ ಕುರಿತು ಸ್ಪಷ್ಟವಾದ ಘೋಷಣೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದ ಹದಿಮೂರು ಜಿಲ್ಲೆಗಳಲ್ಲಿ ತೆಂಗು ಬೆಳೆಗಾರರು ಹೆಚ್ಚಿನ ಪ್ರಮಾಣದಲ್ಲಿ ಕೊಬ್ಬರಿ ಬೆಳೆಯುತ್ತಿದ್ದು, ಬೆಲೆ ಕುಸಿತದಿಂದ ಕಂಗಾಲಾಗುತ್ತಿದ್ದಾರೆ. ಸರ್ಕಾರ ಅವರ ನೆರವಿಗೆ ಧಾವಿಸಿ ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 15 ಸಾವಿರ ರೂ. ನಿಗದಿಪಡಿಸಿ ಖರೀದಿಸಬೇಕು ಎಂದರು.
ರಾಜ್ಯಸಭೆ ಚುನಾವಣೆ : ಅಮಿತ್ ಷಾ ಜೊತೆ ಕುಮಾರಸ್ವಾಮಿ ಮಾತುಕತೆ
ಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿ ಪ್ರಕ್ರಿಯೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮುಂದಾಗಿರುವುದು ಸ್ವಾಗತಾರ್ಹ. ಹೊಸದಾಗಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿರುವುದಾಗಿ ಹೇಳಿರುವುದು ನಿಜವಾದ ಕೊಬ್ಬರಿ ಬೆಳೆಗಾರರಿಗೆ ಸ್ವಲ್ಪ ಮಟ್ಟಿನ ಸಮಾಧಾನ ತಂದಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಾರಿಗೆ ಬಜೆಟ್ ಮಂಡಿಸಿರುವುದಕ್ಕೆ ಅವರನ್ನು ಅಭಿನಂದಿಸುತ್ತೇನೆ. ಆದರೆ, ಗ್ಯಾರಂಟಿ ಯೋಜನೆಗಳಿಗೆ ನೀಡಿರುವಷ್ಟು ಒತ್ತನ್ನು ಅಭಿವೃದ್ಧಿಗೆ ಕೊಟ್ಟಿಲ್ಲ. ಇವೆರಡರ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾಗಿತ್ತು. ಆ ಕೆಲಸವಾಗಿಲ್ಲ. ಇದರಿಂದಾಗಿ ನಾವು ಸೇರಿದಂತೆ ಕಾಂಗ್ರೆ, ಬಿಜೆಪಿ ಶಾಸಕರು ಹಳ್ಳಿಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಮತದಾರರ ಪ್ರಶ್ನೆಗಳಿಗೆ ಉತ್ತರ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಒಂದು ರೂ.ನಲ್ಲಿ ಗ್ಯಾರಂಟಿಗೆ 75 ಪೈಸೆ ಕೊಟ್ಟರೆ, ಅಭಿವೃದ್ಧಿಗೆ 25 ಪೈಸೆ ನೀಡುವಂತಾಗಿದೆ. ಇದುವರೆಗೆ ಅಭಿವೃದ್ಧಿ ಶೂನ್ಯವಾಗಿದೆ ಎಂದು ಅವರು ಟೀಕಿಸಿದರು. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್ ನಾಯಕರು ನಡೆಸಿದ ಹೋರಾಟ ಕೇವಲ ಅಧಿಕಾರಕ್ಕೆ ಬರುವ ತಂತ್ರಗಾರಿಕೆಯಾಗಿದೆ. ಈ ಯೋಜನೆ ಶೀಘ್ರ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಬೇಕು.
ಬರಪರಿಸ್ಥಿತಿಯಿಂದ ಜನರು ಗುಳೆ ಹೋಗುವ ಪರಿಸ್ಥಿತಿ ಇದೆ. ಗುಳೆ ಹೊರಟವರ ಕುಟುಂಬದ ಮಕ್ಕಳಿಗೂ ಶಿಕ್ಷಣ ನೀಡುವಂತಾಗಬೇಕು. ಶಾಲೆ ಬಿಟ್ಟ ಮಕ್ಕಳನ್ನು ಮರಳಿಶಾಲೆಗೆ ಕರತರಬೇಕು. ಮನ್ರೇಗಾ ಕೂಲಿ ಹಣವನ್ನು 316 ರೂ.ಗಳಿಂದ 500 ರೂ.ಗಳಿಗೆ ಹೆಚ್ಚಿಸಬೇಕು. ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಮುಂದಾಗಬೇಕು ಎಂದು ಹೇಳಿದರು.