ಬೆಂಗಳೂರು,ಜು.28- ಬಿಜೆಪಿ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಕಿರುಕುಳ ಹಾಗೂ ಮಾನಸಿಕ ಹಿಂಸೆ ನೀಡುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಆರೋಪಿಸಿದರು.
ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು, ಸಿ.ಟಿ. ರವಿ ಅವರನ್ನು ಬಂಧಿಸಲು ಮುಂದಾಗಿರುವ ಕಾರಣಗಳು ಆಧಾರರಹಿತವಾಗಿವೆ ಎಂದು ಹೇಳಿದರು. ರವಿ ಅವರು ಇಡೀ ಮುಸ್ಲಿಂ ಸಮುದಾಯದ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ದೆಹಲಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಲು ಯತ್ನಿಸಿದ ವ್ಯಕ್ತಿಯನ್ನು ಉಲ್ಲೇಖಿಸಿದ್ದು, ಅದನ್ನು ಇಡೀ ಸಮುದಾಯಕ್ಕೆ ಸಂಬಂಧಿಸಿ ವ್ಯಾಖ್ಯಾನಿಸುವುದು ತಪ್ಪು ಎಂದು ಸ್ಪಷ್ಟಪಡಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧದ ಪ್ರತಿಭಟನೆ ಕುರಿತು ಸಿ.ಟಿ.ರವಿ ಕೇಳಿರುವ ಪ್ರಶ್ನೆ ನ್ಯಾಯಸಮತವಾಗಿದ್ದು, ತಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಅವರಿಗೆ ಇದೆ ಎಂದು ರವಿಕುಮಾರ್ ಸಮರ್ಥಿಸಿಕೊಂಡರು.
ಪ್ರಿಯಾಂಕ್ ಖರ್ಗೆ ಗೃಹ ಸಚಿವರಾದ ಬಳಿಕ ಕಾಂಗ್ರೆಸ್ ಸರ್ಕಾರ ಬಿಜೆಪಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತರ ವಿರುದ್ಧ ಸಂಘರ್ಷದ ಮನೋಭಾವದಿಂದ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟು ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದರು.
ಸಿ.ಟಿ. ರವಿ ಅವರ ಹೇಳಿಕೆಯನ್ನು ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ತಿರುಚಿ ತಪ್ಪಾಗಿ ಅರ್ಥೈಸುತ್ತಿದೆ ಎಂದು ಆರೋಪಿಸಿದ ರವಿಕುಮಾರ್, ಬಿಜೆಪಿ ಅವರೊಂದಿಗೆ ದೃಢವಾಗಿ ನಿಲ್ಲಲಿದ್ದು, ಪೊಲೀಸ್ ಇಲಾಖೆಯ ದುರುಪಯೋಗದ ವಿರುದ್ಧ ರಾಜ್ಯಾದ್ಯಂತ ಪ್ರಬಲ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
