ಬೆಳಗಾವಿ, ಆ.1-ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಜಾಲಿಕೊಪ್ಪ ಗ್ರಾಮ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರೊಂದು ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ 48ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕುರಿಗಳು ಗಂಭೀರವಾಗಿ ಗಾಯಗೊಂಡಿವೆ.
ಬೈಲಹೊಂಗಲದಿಂದ ಬೆಳವಡಿ ಕಡೆಗೆ ಅತಿವೇಗದಲ್ಲಿ ಸಾಗುತ್ತಿದ್ದ ಕಾರು ಜಾಲಿಕೊಪ್ಪ ಗ್ರಾಮದ ಸಮೀಪ ರಸ್ತೆ ದಾಟುತ್ತಿದ್ದ ಕುರಿಗಳ ಹಿಂಡಿನೊಳಗೆ ನುಗ್ಗಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಹಲವಾರು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೂ ಅನೇಕ ಕುರಿಗಳು ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ನರಳಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.
ಅಪಘಾತದಲ್ಲಿ ಮೃತಪಟ್ಟ ಕುರಿಗಳು ಕೆಂಗಾನೂರು ಗ್ರಾಮದ ಚಂದ್ರಪ್ಪ ಹಿತ್ತಲಮನಿ ಹಾಗೂ ದೊಡ್ಡವಾಡ ಗ್ರಾಮದ ಬೀರಪ್ಪ ಅವರಿಗೆ ಸೇರಿದ್ದವು ಎಂದು ತಿಳಿದುಬಂದಿದೆ. ಹಲವಾರು ಗರ್ಭಿಣಿ ಕುರಿಗಳ ಹೊಟ್ಟೆ ಸೀಳಿ ಮರಿಗಳು ಹೊರಬಿದ್ದಿರುವ ದೃಶ್ಯ ಸ್ಥಳೀಯರ ಕಣ್ಣೀರಿಗೂ ಕಾರಣವಾಯಿತು.
ಘಟನೆಯಿಂದ ರಸ್ತೆ ತುಂಬ ಮೃತ ಹಾಗೂ ಗಾಯಗೊಂಡ ಕುರಿಗಳು ಬಿದ್ದಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು. ಕುರಿಗಳ ಸಾವಿನಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದ್ದು, ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ ಕಾರು ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕುರಿಗಳ ಮಾಲೀಕರು ಆಗ್ರಹಿಸಿದ್ದಾರೆ.
ಅಪಘಾತದ ಬಳಿಕ ಕಾರು ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಮಾಹಿತಿ ತಿಳಿದು ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಚಾಲಕನ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.
