ನೋಯ್ಡಾ,ಆ.5- ಲೋಕಸಭೆ ಸಚಿವಾಲಯದಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಯೊಬ್ಬರು ನೋಯ್ಡಾದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸ್ಥಳದಿಂದ ಸಾಲದ ಹೊರೆ ಉಲ್ಲೇಖವಿರುವ ಡೆತ್‌ನೋಟ್‌ವೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮೃತರನ್ನು ಗೌರವ್ ಗೌತಮ್(40)ಎಂದು ಗುರುತಿಸಲಾಗಿದೆ. ಅವರು ಸೆಕ್ಟರ್-82ರ ಕೇಂದ್ರಿಯ ವಿಹಾರ್-2 ವಸತಿ ಸಮುಚ್ಚಯದಲ್ಲಿರುವ ತಮ ಫ್ಲಾಟ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಫೇಸ್-2 ಪೊಲೀಸ್ ಠಾಣೆಯ ಅಧಿಕಾರಿಗಳ ಪ್ರಕಾರ, ಗೌತಮ್ ಅವರನ್ನು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಬಂದ ಮಾಹಿತಿಯ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡರು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಘಟನೆ ನಡೆದ ವೇಳೆ ಗೌತಮ್ ಅವರ ಪತ್ನಿ ತಮ ತವರು ಮನೆಗೆ ತೆರಳಿದ್ದರು. ಮನೆಗೆ ಮರಳಿದಾಗ ಫ್ಲಾಟ್ ಒಳಗಿನಿಂದ ಬಾಗಿಲು ಹಾಕಿಕೊಂಡಿರುವುದನ್ನು ಗಮನಿಸಿ ಅನುಮಾನಗೊಂಡ ಅವರು, ಭದ್ರತಾ ಸಿಬ್ಬಂದಿಯ ಸಹಾಯದಿಂದ ಬಾಗಿಲು ತೆರೆದು ಒಳ ಪ್ರವೇಶಿಸಿದ್ದಾರೆ.
ಆಗ ಗೌತಮ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಬದುಕಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ನ್ಯಾಯ ವಿಜ್ಞಾನ (ಫೊರೆನ್ಸಿಕ್) ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದೆ.
ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಫ್ಲಾಟ್‌ನಿಂದ ಪತ್ತೆಯಾದ ಡೆತ್‌ನೋಟ್‌ನಲ್ಲಿ ಸಾಲದ ಕುರಿತು ಉಲ್ಲೇಖ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅದರಲ್ಲಿರುವ ವಿವರಗಳನ್ನು ತನಿಖೆಯ ಭಾಗವಾಗಿ ಪರಿಶೀಲಿಸಲಾಗುತ್ತಿದೆ.ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
