ಯಾದಗಿರಿ, ಆ.5- ಕಡೆಯಚೂರು ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕೆಮಿಕಲ್ ಕಾರ್ಖಾನೆ ಯಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ದುರ್ಘಟನೆ ಇಂದು ಮುಂಜಾನೆ ನಡೆದಿದೆ. ಕಡೆಯಚೂರು ಕೈಗಾರಿಕಾ ಪ್ರದೇಶದಲ್ಲಿರುವ ಹೈದರಾಬಾದ್ ಮೂಲದ ಖಾಸಗಿ ಕಂಪನಿಯಲ್ಲಿ ಇಂದು ಮುಂಜಾನೆ 3 ಗಂಟೆಗೆ ಈ ಅವಘಡ ಸಂಭವಿಸಿದೆ.
ಅನಿಲ ಸೋರಿಕೆಯಿಂದ ಕಾರ್ಖಾನೆಯೊಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಅಸ್ವಸ್ಥರಾಗಿದ್ದಾರೆ. ಮೃತರನ್ನು ಮಧ್ಯಪ್ರದೇಶದ ವಿಕ್ರಂ ಸಿಂಗ್ ಗೋಂದ ಮತ್ತು ಸಂಜಯ್ ಸಿಂಗ್ ಗೋಂದಾ, ತೆಲಂಗಾಣದ ಕಾಟ್ಲೆ ಗಣೇಶ್ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಆಂಧ್ರಪ್ರದೇಶದ ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸೌ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಾಯಕಾರಿ ಕೆಮಿಕಲ್ ಅನಿಲ ಸೋರಿಕೆಯಿಂದ ಈ ದುರಂತ ಸಂಭವಿಸಿದ್ದು, ಘಟನೆ ಬಳಿಕ ಕಾರ್ಖಾನೆಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೈದಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಅನಿಲ ಸೋರಿಕೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.
