ಬೆಂಗಳೂರು,ಆ.8- ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ವೈಟ್‌ಫೀಲ್ಡ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಪೊಲೀಸರು ಆಪರೇಷನ್ ಮುಕ್ತ ಹೆಸರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ವಿಶೇಷ ಕಾರ್ಯಾಚರಣೆ ಕೈಗೊಂಡು 50 ಕಡೆ ದಾಳಿ ಮಾಡಿದ್ದಾರೆ. ದಾಳಿ ಸಂದರ್ಭದಲ್ಲಿ ಅನುಮಾನಾಸ್ಪದವಾಗಿ ಕಂಡುಬಂದ ಸುಮಾರು 2 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆದು ಅವರ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೋಧನೆ ನಡೆಸುತ್ತಿದ್ದಾರೆ.
ವರ್ತೂರು, ಕಾಡುಗೋಡಿ, ಮಾರತಹಳ್ಳಿ, ಬೆಳ್ಳಂದೂರು, ಎಲೆಕ್ಟ್ರಾನಿಕ್ ಸಿಟಿ, ಬೇಗೂರು, ಬಂಡೇಪಾಳ್ಯ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನೆಲೆಸಿರುವ ಬಾಂಗ್ಲಾ ಪ್ರಜೆಗಳ ಶೆಡ್‌ಗಳ ಮೇಲೆ ದಾಳಿ ನಡೆಸಿದ್ದಾರೆ.
ಇಲ್ಲಿ ನೆಲೆಸಿರುವವರ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ವೋಟರ್ ಐಡಿ ಸೇರಿದಂತೆ ವಿವಿಧ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ವರ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ಅಲ್ಲದೆ ನೂರಕ್ಕೂ ಹೆಚ್ಚು ಶೆಡ್‌ಗಳಿರುವ ಪ್ರದೇಶಗಳಲ್ಲೂ ಕಾರ್ಯಾಚರಣೆ ಕೈಗೊಂಡು ಅಲ್ಲಿ ವಾಸವಿರುವ ಪ್ರತಿಯೊಬ್ಬ ವ್ಯಕ್ತಿ ಹಾಗೂ ಮಹಿಳೆಯರ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ದಾಖಲೆಗಳ ಪರಿಶೀಲಿಸಿ ಕ್ರಮ :
ಪ್ರಮುಖವಾಗಿ ಎಸ್‌ಐಆರ್ ಮಾಹಿತಿ ಸೇರಿದಂತೆ ಅವರ ಸ್ವಂತ ಊರು, ಅಂಚೆ ಕಚೇರಿ ಹಾಗೂ ಸ್ಥಳೀಯ ಪೊಲೀಸ್ ಠಾಣೆಯ ವಿವರಗಳನ್ನು ಪೊಲೀಸರು ಸ್ಥಳೀಯ ನಿವಾಸಿಗಳಿಂದ ಕೇಳಿ ಪಡೆದುಕೊಂಡಿದ್ದಾರೆ. ದಾಖಲೆಗಳಲ್ಲಿರುವ ಮಾಹಿತಿಗೂ, ವ್ಯಕ್ತಿಗಳು ನೀಡುವ ಮಾಹಿತಿಗೂ ಹೊಂದಾಣಿಕೆ ಇದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್‌ಸಿಂಗ್ ಅವರ ಸೂಚನೆ ಮೇರೆಗೆ ಬಾಂಗ್ಲಾ ವಲಸಿಗರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ಈ ಸಂಜೆಗೆ ತಿಳಿಸಿದ್ದಾರೆ.ಈ ಕಾರ್ಯಾಚರಣೆಯಲ್ಲಿ ಅಧಿಕಾರಿಗಳೂ ಸೇರಿದಂತೆ 500ಕ್ಕೂ ಹೆಚ್ಚು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಎಫ್‌ಆರ್‌ಆರ್‌ಒ ಮುಂದೆ ಹಾಜರು :
ಕಾರ್ಯಾಚರಣೆ ವೇಳೆ ವಿದೇಶಿ ಪ್ರಜೆಗಳು ಪತ್ತೆಯಾದರೆ ಅವರ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ದಾಖಲೆಗಳಲ್ಲಿ ಅನುಮಾನ ಕಂಡುಬಂದಲ್ಲಿ ಹೆಚ್ಚಿನ ಪರಿಶೀಲನೆ ನಡೆಸಿ, ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ಮುಂದೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ. ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಕ್ರಮವಾಗಿ ನೆಲೆಸಿರುವುದು ದೃಢಪಟ್ಟ ವಿದೇಶಿ ಪ್ರಜೆಗಳನ್ನು ಅವರ ದೇಶಕ್ಕೆ ವಾಪಸ್ ಕಳುಹಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ತಿಳಿಸಿದ್ದಾರೆ.
