ಬೆಂಗಳೂರು,ಮಾ.6- ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯಾಗಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ.
ಈ ಕ್ಷೇತ್ರದಿಂದ ಮಂಜುನಾಥ್ ಅವರ ಲ್ಲದೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸ್ಪರ್ಧೆಗಿಳಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದ್ದು, ಇನ್ನು ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಿರುವ ಎನ್ಡಿಎ ಮೈತ್ರಿಕೂಟದ ರಾಜ್ಯ ನಾಯಕರು ನಿನ್ನೆ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಸಭೆ ಸೇರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ಮಹತ್ವದ ಚರ್ಚೆ ನಡೆಸಿದ್ದಾರೆ.ಸಭೆಯಲ್ಲಿ ಈ ಕ್ಷೇತ್ರದ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಸ್ರ್ಪಸಬೇಕೆಂಬ ಒತ್ತಡವನ್ನು ಹಾಕಲಾಗಿದೆ. ಅಲ್ಲದೆ ಡಾ.ಸಿ.ಎನ್.ಮಂಜುನಾಥ್ ಹಾಗೂ ಸಿ.ಪಿ.ಯೋಗೇಶ್ವರ್ ಅವರನ್ನು ಸ್ಪರ್ಧೆಗಿಳಿಸುವ ಬಗ್ಗೆಯೂ ಗಂಭೀರ ಚರ್ಚೆ ನಡೆಸಲಾಗಿದೆ.
ಈ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯಾಗಿ ಡಾ.ಮಂಜುನಾಥ್ ಸ್ಪರ್ಧೆ ಮಾಡಲಿದ್ದಾರೆ ಎಂಬ ವಿಚಾರ ಈಗಾಗಲೇ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮೂವರಲ್ಲಿ ಯಾರನ್ನು ಕಣಕ್ಕಿಳಿಸಿದರೆ ಗೆಲುವು ಸುಲಭವಾಗಲಿದೆ ಎಂಬ ವಿಚಾರದ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.
ಸಭೆಯಲ್ಲಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ವಿವಿಧ ವಿಧಾಸಭಾ ಕ್ಷೇತ್ರಗಳ ಮುಖಂಡರು ಭಾಗವಹಿಸಿದ್ದರು. ಪ್ರಮುಖವಾಗಿ ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಮುನಿರತ್ನ, ಡಿ.ನಾಗರಾಜಯ್ಯ, ರಾಜ್ಯಸಭೆಯ ಮಾಜಿ ಸದಸ್ಯ ಡಿ.ಕುಪೇಂದ್ರ ರೆಡ್ಡಿ, ಶಾಸಕ ಎಂ.ಕೃಷ್ಣಪ್ಪ, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕ ಮಂಜುನಾಥ್, ಒಕ್ಕಲಿಗ ಸಂಘದ ಪ್ರಧಾನ ಕಾರ್ಯದರ್ಶಿ ಜಯಮುತ್ತು, ನಿರ್ದೇಶಕ ಡಾ.ನಾರಾಯಣ ಸ್ವಾಮಿ, ಕೃಷ್ಣಕುಮಾರ್, ಕುಣಿಗಲ್ ಜಗದೀಶ್, ಕೊಟ್ಟಿಗೆರೆ ಮಂಜುನಾಥ್, ಸಿದ್ದಮರಿಗೌಡ ಕನಕಪುರ ಸೇರಿದಂತೆ ಬಿಜೆಪಿ, ಜೆಡಿಎಸ್ನ ಹಲವು ಮುಖಂಡರು ಭಾಗವಹಿಸಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆಗಿಳಿಸಲಿರುವ ಅಭ್ಯರ್ಥಿಯನ್ನು ಶೀಘ್ರ ಆಯ್ಕೆ ಮಾಡಿ ಅಕೃತವಾಗಿ ಪ್ರಕಟಿಸುವಂತೆ ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ.ಚುನಾವಣಾ ವೇಳಾಪಟ್ಟಿ ಪ್ರಕಟವಾಗುವವರೆಗೂ ಕಾಯದೇ ಅಕೃತ ಅಭ್ಯರ್ಥಿಯನ್ನು ಪ್ರಕಟಿಸಬೇಕು. ಅವರ ಗೆಲುವಿಗೆ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಿದ್ದಾರೆ.
ಶೀಘ್ರ ಅಭ್ಯರ್ಥಿ ಘೋಷಣೆ ಮಾಡುವ ಮುಖಂಡರ ಆಗ್ರಹಕ್ಕೆ ಎಚ್.ಡಿ.ಕುಮಾರಸ್ವಾಮಿ ಕೂಡ ಸಮ್ಮತಿ ಸೂಚಿಸಿದ್ದಾರೆ. ಎನ್ಡಿಎ ಅಭ್ಯರ್ಥಿಯಾಗಿ ಯಾರೇ ಸ್ಪರ್ಧೆಗಿಳಿದರೂ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.