ಶಿಡ್ಲಘಟ್ಟ, ಆ. 10- ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಗ್ರಾಮಗಳ ರೈತರ ಲವತ್ತಾದ ಜಮೀನುಗಳನ್ನು ಕೆಐಎಡಿಬಿ ಮೂಲಕ ಸ್ವಾಧೀನಪಡಿಸಿ ಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲ ವ್ಯಕ್ತಪಡಿಸಿದರು.
ಜಂಗಮಕೋಟೆ ಕ್ರಾಸ್ ಹಾಗೂ ಯಣ್ಣಂಗೂರು ಭಾಗಕ್ಕೆ ಭೇಟಿ ನೀಡಿದ ಅವರು, ಭೂಸ್ವಾಧೀನಕ್ಕೆ ಒಳಪಡುವ ಜಮೀನುಗಳನ್ನು ಪರಿಶೀಲಿಸಿ ರೈತರು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಇದೇ ವೇಳೆ ಬರ ಪರಿಸ್ಥಿತಿಯ ಬಗ್ಗೆಯೂ ಸ್ಥಳ ಪರಿಶೀಲನೆ ನಡೆಸಿ, ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು.
ಜಂಗಮಕೋಟೆ ಹೋಬಳಿಯ 13 ಗ್ರಾಮಗಳ ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ರೇಷೆ, ಹಣ್ಣು, ತರಕಾರಿ ಹಾಗೂ ಹೈನುಗಾರಿಕೆಯನ್ನು ನಂಬಿಕೊಂಡು ಬದುಕುತ್ತಿರುವ ರೈತರ ಲವತ್ತಾದ ಜಮೀನುಗಳನ್ನು ಒತ್ತಾಯಪೂರ್ವಕವಾಗಿ ಕಿತ್ತುಕೊಳ್ಳುವ ಪ್ರಯತ್ನ ಅಕ್ಷಮ್ಯ ಅಪರಾಧ ಎಂದು ವಿಜಯೇಂದ್ರ ಆರೋಪಿಸಿದರು.
ಶೇ.85ಕ್ಕೂ ಹೆಚ್ಚು ರೈತರು ತಮ ಜಮೀನುಗಳನ್ನು ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಿರುವುದು ಏಕೆ ಎಂಬ ಪ್ರಶ್ನೆ ಎದುರಾಗಿದೆ. ರೈತರ ಒಪ್ಪಿಗೆಯಿಲ್ಲದೆ ಭೂಮಿ ಕಸಿದುಕೊಳ್ಳಲು ಮುಂದಾಗಿರುವ ಸರ್ಕಾರದ ಕ್ರಮದ ಹಿಂದೆ ರಿಯಲ್ ಎಸ್ಟೇಟ್ ವ್ಯವಹಾರದ ಉದ್ದೇಶವಿದೆ ಎಂಬ ಅನುಮಾನ ಮೂಡಿದೆ ಎಂದು ದೂರಿದರು.
ಆಗ್ಟ್ 13ರಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಜಂಗಮಕೋಟೆ ರೈತರ ಸಮಸ್ಯೆ ಯನ್ನು ಸದನದಲ್ಲಿ ಪ್ರಸ್ತಾಪಿಸಿ, ಅವರ ಪರವಾಗಿ ಧ್ವನಿ ಎತ್ತುತ್ತೇವೆ. ರೈತರ ಹೋರಾಟಕ್ಕೆ ಭಾರತೀಯ ಜನತಾ ಪಕ್ಷ ದೃಢವಾಗಿ ಬೆಂಬಲ ನೀಡಲಿದೆ. ರೈತರು ನಡೆಸುತ್ತಿರುವ ಹೋರಾಟದಲ್ಲಿ ಪಕ್ಷ ಅವರೊಂದಿಗೆ ನಿಲ್ಲಲಿದೆ ಎಂದು ವಿಜಯೇಂದ್ರ ಭರವಸೆ ನೀಡಿದರು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಕಾರ್ಯಾ ಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಅವರು ವಿಜಯೇಂದ್ರ ಅವರಿಗೆ ಜಂಗಮಕೋಟೆ ಭಾಗದ ರೈತರ ಭೂಸ್ವಾಧೀನ ವಿರೋಧಿ ಹೋರಾ ಟದ ಕುರಿತು ವಿವರಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮಾತನಾಡಿ, ರೈತರ ಹೋರಾಟದಲ್ಲಿ ಪಕ್ಷದ ಮುಖಂಡರು ಭಾಗವಹಿಸಿದ್ದು, ರೈತರ ಪರವಾಗಿ ವಿಧಾನ ಸಭೆಯಲ್ಲಿಯೂ ಧ್ವನಿ ಎತ್ತುವಂತೆ ವಿಜಯೇಂದ್ರ ಅವರನ್ನು ಮನವಿ ಮಾಡಲಾಗಿದೆ ಎಂದು ಹೇಳಿದರು.
ಬಿಜೆಪಿ ಮುಖಂಡರಾದ ವೈ.ಎ.ನಾರಾಯಣಸ್ವಾಮಿ, ವೇಣುಗೋಪಾಲ್, ಎಂ.ರಾಜಣ್ಣ, ಸೀಕಲ್ ಆನಂದಗೌಡ, ಸುರೇಂದ್ರಗೌಡ, ದೇವರಾಜ್, ನರೇಶ್, ಮೋಹನ್, ಪ್ರತಾಪ್, ಮಂಜುಳಾ, ರಾಗಿಣಿ, ತ್ರಿವೇಣಿ, ಆಂಜನೇಯಗೌಡ ಸೇರಿದಂತೆ ರೈತ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
