Homeಬೆಂಗಳೂರುಈಜಿಪುರ ಬಫರ್ ರಸ್ತೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಮಹೇಶ್ವರ್ ರಾವ್ ಸೂಚನೆ

ಈಜಿಪುರ ಬಫರ್ ರಸ್ತೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಮಹೇಶ್ವರ್ ರಾವ್ ಸೂಚನೆ

Maheshwar Rao instructs to complete Ejipura buffer road work quickly

ಬೆಂಗಳೂರು, ಆ.12:ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಈಜಿಪುರ ಬಳಿಯ ಬಫರ್ ರಸ್ತೆ (ಸಂಚಾರಯುಕ್ತ ರಸ್ತೆ) ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಬಿಎ ವ್ಯಾಪ್ತಿಯ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಲೋವರ್ ಅಗರಂ ಜಂಕ್ಷನ್‌ನಿಂದ ಈಜಿಪುರ ರಸ್ತೆಯವರೆಗೆ ಪ್ರಗತಿಯಲ್ಲಿರುವ 5.45 ಕಿ.ಮೀ. ಉದ್ದದ ಬಫರ್ ರಸ್ತೆ ಕಾಮಗಾರಿಗೆ ವೇಗ ನೀಡಿ, ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಲೋವರ್ ಅಗರಂ ರಸ್ತೆಯಿಂದ ಈಜಿಪುರ ರಸ್ತೆಯವರೆಗೆ 2.45 ಕಿ.ಮೀ. ಹಾಗೂ ಈಜಿಪುರ ರಸ್ತೆಯಿಂದ ಸರ್ಜಾಪುರ ರಸ್ತೆಯವರೆಗೆ 3 ಕಿ.ಮೀ. ಸೇರಿದಂತೆ ಒಟ್ಟು 5.45 ಕಿ.ಮೀ. ಉದ್ದದ ಬಫರ್ ರಸ್ತೆ ನಿರ್ಮಿಸಲಾಗುತ್ತಿದೆ. ಈ ಸಂಬAಧ ಈಜಿಪುರ ಬಳಿ ಬಫರ್ ರಸ್ತೆ ನಿರ್ಮಾಣಕ್ಕಾಗಿ ರಕ್ಷಣಾ ಇಲಾಖೆಯಿಂದ 5.34 ಎಕರೆ ಜಾಗವನ್ನು ಹಸ್ತಾಂತರಿಸಲಾಗಿದ್ದು, ಈ ಭಾಗದಲ್ಲಿ ಶೇ. 90ರಷ್ಟು ತಡೆಗೋಡೆ ಕಾಮಗಾರಿ ಪೂರ್ಣಗೊಂಡಿದೆ.

ಜೊತೆಗೆ, ಚರಂಡಿ ಹಾಗೂ ಪಾದಚಾರಿ ಮಾರ್ಗ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ರಸ್ತೆ ನಿರ್ಮಾಣದ ಸಂದರ್ಭದಲ್ಲಿ ಮಳೆ ನೀರು ವ್ಯರ್ಥವಾಗಿ ಹರಿದುಹೋಗದೆ ಭೂಮಿಗೆ ಇಂಗುವಂತೆ ಸೂಕ್ತ ವಿನ್ಯಾಸ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಫರ್ ರಸ್ತೆಗೆ ಹೊಂದಿಕೊಂಡಂತಿರುವ ಎಸ್.ಟಿ ಬೆಡ್ ಕಾಲೋನಿ ಪ್ರದೇಶವು ತಗ್ಗು ಪ್ರದೇಶವಾಗಿರುವುದರಿಂದ, ಸದರಿ ಪ್ರದೇಶದಲ್ಲಿ ಪ್ರವಾಹ ಉಂಟಾಗದAತೆ ಮಳೆ ನೀರು ಸರಾಗವಾಗಿ ಹರಿದು ಹೋಗಲು ಬಫರ್ ವ್ಯಾಪ್ತಿಯಲ್ಲಿ ಸೂಕ್ತ ಮಾದರಿಯ ಮಳೆ ನೀರು ಚರಂಡಿಗಳನ್ನು ನಿರ್ಮಾಣ ಮಾಡಲು ಕ್ರಮವಹಿಸುವಂತೆ ಸೂಚಿಸಿದರು.

ಈಜಿಪುರ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ:
ಈಜಿಪುರ ಮೇಲ್ಸೇತುವೆ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದ ಮುಖ್ಯ ಆಯುಕ್ತರು, ಕಾಮಗಾರಿಗೆ ಮತ್ತಷ್ಟು ವೇಗ ನೀಡಿ, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿಕೊಂಡು ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

ಸೈಕಲ್ ಟ್ರ‍್ಯಾಕ್ ನಿರ್ಮಿಸಲು ಸೂಚನೆ:
ಈಜಿಪುರ ಮೇಲ್ಸೇತುವೆಯ ಕೆಳಭಾಗದ ಸರ್ವಿಸ್ ರಸ್ತೆಯಲ್ಲಿರುವ ಪಾದಚಾರಿ ಮಾರ್ಗವು ಕಿರಿದಾಗಿರುವುದನ್ನು ಗಮನಿಸಿದ ಅವರು, ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡ ತಕ್ಷಣ ಪಾದಚಾರಿ ಮಾರ್ಗವನ್ನು ಅಗಲೀಕರಣ ಮಾಡುವಂತೆ ತಿಳಿಸಿದರು.

ಪಾದಚಾರಿ ಮಾರ್ಗ ನಿರ್ಮಿಸುವ ಸಂದರ್ಭದಲ್ಲಿ ಸೈಕಲ್ ಟ್ರ‍್ಯಾಕ್‌ನ್ನು ಕೂಡಾ ನಿರ್ಮಾಣ ಮಾಡಬೇಕು. ಸೈಕಲ್ ಟ್ರ್ಯಾಕ್ ನಲ್ಲಿ ದ್ವಿಚಕ್ರ ವಾಹನಗಳು ಪ್ರವೇಶವಾಗದಂತೆ ಸೂಕ್ತ ಮಾದರಿಯ ಸೈಕಲ್ ಟ್ರ್ಯಾಕ್ ನಿರ್ಮಾಣ ಮಾಡಲು ಬಿಸ್ಮೈಲ್ ಮುಖ್ಯ ಅಭಿಯಂತರರಿಗೆ ಸೂಚನೆ ನೀಡಿದರು.

ಮೇಲ್ಸೇತುವೆಯ ಕೆಳಭಾಗದಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಕಲ್ಪಿಸಲು ಅಗತ್ಯ ದೀಪಗಳನ್ನು ಅಳವಡಿಸುವ ಕುರಿತು ಅಂದಾಜು ಪಟ್ಟಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಯನಗರ ವೈಟ್‌ಟಾಪಿಂಗ್ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ:
ಜಯನಗರದಲ್ಲಿ 22ನೇ ಕ್ರಾಸ್‌ನ ನಾಗಾರ್ಜುನದಿಂದ ಕೂಲ್ ಜಾಯಿಂಟ್‌ವರೆಗೆ 690 ಮೀಟರ್ ಉದ್ದದ ರಸ್ತೆಯಲ್ಲಿ ವೈಟ್‌ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. ಒಂದು ಭಾಗದಲ್ಲಿ ವೈಟ್‌ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದ್ದು, ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ.

ವೈಟ್‌ಟಾಪಿಂಗ್ ಕಾಮಗಾರಿ ಪೂರ್ಣಗೊಂಡ ಭಾಗದಲ್ಲಿ ಕ್ಯೂರಿಂಗ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟು, ಮತ್ತೊಂದು ಭಾಗದಲ್ಲಿ ವೈಟ್‌ಟಾಪಿಂಗ್ ಕಾಮಗಾರಿಯನ್ನು ಕೈಗೆತ್ತಿಕೊಂಡು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಇದೇ ರಸ್ತೆಯ ಬದಿಯಲ್ಲಿರುವ ಅಂಗಡಿಗಳ ಮುಂಭಾಗ ತ್ಯಾಜ್ಯವನ್ನು ಬಿಸಾಡಿರುವುದನ್ನು ಗಮನಿಸಿದ ಅವರು, ರಸ್ತೆ ಬದಿಯಲ್ಲಿ ತ್ಯಾಜ್ಯ ಹಾಕದಂತೆ ಅಂಗಡಿಗಳ ಮುಂಭಾಗದಲ್ಲಿ ಸೂಕ್ತ ಡಸ್ಟ್ಬಿನ್‌ಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು. ಅಲ್ಲದೆ, ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡಿರುವ ಅಂಗಡಿಗಳಿಗೆ ಎಚ್ಚರಿಕೆ ನೀಡಿ, ನಿಯಮಾನುಸಾರ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ವೇಳೆ ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ಕೆ.ಎನ್. ರಮೇಶ್, ಅಪರ ಆಯುಕ್ತರಾದ ಡಾ. ನವೀನ್ ಕುಮಾರ್ ರಾಜು, ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ, ಮಾದೇಶ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
spot_img

Latest News