ಬೆಂಗಳೂರು, ಆ.20- ರಾಜ್ಯದಲ್ಲಿ 120 ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳು ಮಂಜೂರಾಗಿದ್ದು, 117 ಪಾಲಿಟೆಕ್ನಿಕ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 72,057 ಸೀಟುಗಳು ಲಭ್ಯವಿದ್ದು, ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ವಿಧಾನಸಭೆಗೆ ತಿಳಿಸಿದರು.
ರಾಜ್ಯದಲ್ಲಿ 25,921 ಪಾಲಿಟೆಕ್ನಿಕ್ ಸೀಟುಗಳು ಪ್ರವೇಶ ಪಡೆಯದೆ ಖಾಲಿ ಉಳಿದಿವೆ ಎಂದು ಅವರು ಹೇಳಿದರು. ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಆಡಳಿತ ಪಕ್ಷದ ಶಾಸಕ ಅಬ್ಬಯ್ಯ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 46,136 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಉಳಿದ ಸೀಟುಗಳು ಖಾಲಿ ಉಳಿದಿವೆ ಎಂದರು.
ಕಾಗವಾಡ, ಮಾಗಡಿ ಹಾಗೂ ಟಿ. ನರಸೀಪುರದಲ್ಲಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡಗಳ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಕಾಮಗಾರಿ ಪೂರ್ಣಗೊಂಡ ನಂತರ ಆ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು. ತಾಂತ್ರಿಕ ಶಿಕ್ಷಣ ಇಲಾಖೆಯಡಿ 9 ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜುಗಳು ಹಾಗೂ ಒಂದು ಅನುದಾನಿತ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಶೇ.30ರಷ್ಟು ಪ್ರವೇಶಾತಿಯನ್ನು ವಿದ್ಯಾರ್ಥಿನಿಯರಿಗೆ ಮೀಸಲಿಡಲಾಗಿದೆ. ಹುಬ್ಬಳ್ಳಿಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯು ನಾಲ್ಕು ಕೋರ್ಸ್‌ಗಳು ಹಾಗೂ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯು ಆರು ಕೋರ್ಸ್‌ಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆ ಎಂದರು.
2025-26ನೇ ಸಾಲಿನಲ್ಲಿ 109 ಸರ್ಕಾರಿ, 43 ಅನುದಾನಿತ ಹಾಗೂ 135 ಖಾಸಗಿ ಪಾಲಿಟೆಕ್ನಿಕ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವರು ಹೇಳಿದರು.
