ಬೆಂಗಳೂರು,ಆ.21- ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಟೂರಿಸ್ಟ್ ಬಸ್ಸು ಇಂದು ಮುಂಜಾನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ಉರುಳಿಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 29 ಮಂದಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಬಸ್ಸಿನ ಚಾಲಕ ಗುರುಪ್ರಸಾದ್ (50), ಕ್ಲೀನರ್ ಶಂಕರ್ (40) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ನಗರದ ನರ್ಸಿಂಗ್ ಕಾಲೇಜಿನ 50 ವಿದ್ಯಾರ್ಥಿಗಳು ಪ್ರವಾಸಕ್ಕಾಗಿ ಗೋವಾಕ್ಕೆ ಹೋಗಿ ವಾಪಸ್ಸು ಬರುತ್ತಿದ್ದಾಗ ಇಂದು ಮುಂಜಾನೆ 5.30ರ ಸಂದರ್ಭದಲ್ಲಿ ಐಮಂಗಲ ಬಳಿ ಅಪಘಾತ ಉಂಟಾಗಿದೆ. ಸುದ್ದಿ ತಿಳಿದ ಐಮಂಗಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
