ಬೆಂಗಳೂರು, ಆ.22- ದೇಶದ ಯಾವುದೇ ನಗರಗಳಲ್ಲಿ ಇಲ್ಲದ ಪಾರ್ಕಿಂಗ್ ಶುಲ್ಕವನ್ನು ಬೆಂಗಳೂರು ನಗರದಲ್ಲಿ ವಿಧಿಸಲು ಹೊರಟಿರುವುದನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜೆಡಿಎಸ್ ಅಧ್ಯಕ್ಷ ಎಚ್.ಎಂ. ರಮೇಶ್ಗೌಡ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮನೆ ಮುಂದೆ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕ ವಿಧಿಸುವ ಜನವಿರೋಧಿ ನೀತಿಯನ್ನು ಕೈಬಿಡಬೇಕು. ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಪಾರ್ಕಿಂಗ್ ಶುಲ್ಕ ವಿಧಿಸಲು ಮುಂದಾಗಿದ್ದು, ಈ ಕ್ರಮವನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಜೆ.ಸಿ. ರಸ್ತೆಯಲ್ಲಿ ಬಿಬಿಎಂಪಿ ವತಿಯಿಂದ ನಿರ್ಮಿಸಿದ್ದ ಪಾರ್ಕಿಂಗ್ ಕಟ್ಟಡವನ್ನು ಖಾಸಗಿ ವ್ಯಕ್ತಿಗಳಿಗೆ ವಾಣಿಜ್ಯ ಉದ್ದೇಶಕ್ಕಾಗಿ ಬಾಡಿಗೆ ನೀಡಲಾಗಿದೆ. ಅದನ್ನು ವಾಪಸ್ ಪಡೆದು ವಾಹನಗಳ ಪಾರ್ಕಿಂಗ್ಗೆ ಅವಕಾಶ ಕಲ್ಪಿಸಬೇಕು. ಸರ್ಕಾರಿ ಕಚೇರಿಗಳು, ಸರ್ಕಾರಿ ಆಸ್ಪತ್ರೆಗಳು, ಜಿಬಿಎ ಹಾಗೂ ಬಿಡಿಎ ಕಚೇರಿಗಳ ಬಳಿಯೇ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ಮೊದಲು ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಈ ಬಗ್ಗೆ ಸಾರ್ವಜನಿಕ ಚರ್ಚೆಗೂ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸದೆ, ಮನೆ ಮುಂದೆ ನಿಲ್ಲಿಸುವ ವಾಹನಗಳಿಗೂ ಪಾರ್ಕಿಂಗ್ ಶುಲ್ಕ ವಿಧಿಸುವ ಕ್ರಮ ಸರಿಯಲ್ಲ. ಇದು ಜನರ ವಿಶ್ವಾಸ ಕಳೆದುಕೊಂಡಿರುವ ಸರ್ಕಾರವಾಗಿದೆ. ಈ ಸಂಬಂಧ ಜಿಬಿಎ ಮುಖ್ಯ ಆಯುಕ್ತರು, ಆಯುಕ್ತರುಗಳು ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ಪತ್ರ ಬರೆಯುವುದಾಗಿ ತಿಳಿಸಿದರು.
ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ ಮಾತನಾಡಿ, ಬೆಂಗಳೂರು ನಗರದಲ್ಲಿ ಚುನಾವಣೆ ನಡೆಸಲು ನಮ್ಮ ಪಕ್ಷ ಸಿದ್ಧವಿದೆ. ಆದರೆ ಒಂದಲ್ಲ ಒಂದು ನೆಪವೊಡ್ಡಿ ಸರ್ಕಾರ ಚುನಾವಣೆಯನ್ನು ಮುಂದೂಡುತ್ತಾ ಬಂದಿದೆ. ಬಿಬಿಎಂಪಿಯ ಹೆಸರನ್ನು ಬದಲಾಯಿಸಿರುವುದೇ ಸರ್ಕಾರದ ಸಾಧನೆ ಎಂದು ಟೀಕಿಸಿದರು.
ಬೆಂಗಳೂರು ನಗರದಲ್ಲಿ ಒಂದೂವರೆ ಕೋಟಿ ವಾಹನಗಳಿವೆ. ಫುಟ್ಪಾತ್ ತೆರವುಗೊಳಿಸಿರುವ ಸಣ್ಣಪುಟ್ಟ ವರ್ತಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಪಾರ್ಕಿಂಗ್ ವಿಚಾರದಲ್ಲಿ ದಂಡ ವಿಧಿಸಿ ಜನರಿಗೆ ತೊಂದರೆ ನೀಡಬಾರದು. ಈ ವಿಷಯವನ್ನು ಸದನದ ಒಳಗೂ ಹೊರಗೂ ಚರ್ಚಿಸಲಾಗುವುದು ಎಂದರು.
ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುತ್ತಿಲ್ಲ, ಕಸವನ್ನೂ ತೆಗೆಯುತ್ತಿಲ್ಲ. ತರಾತುರಿಯಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸುವ ಬದಲು ಸಾರ್ವಜನಿಕ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ, ವಿ. ಕೃಷ್ಣಪ್ಪ, ಪಕ್ಷದ ಮುಖಂಡರಾದ ತಿಮ್ಮೇಗೌಡ, ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.
