ಬೆಂಗಳೂರು, ಸೆ.9- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ನಾಳೆಗೆ 100 ದಿನ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಈ ಅವಧಿಯಲ್ಲಿ ಸರ್ಕಾರ ಕೈಗೊಂಡಿರುವ ಹಲವು ಮಹತ್ವದ ನಿರ್ಧಾರಗಳು ಹಾಗೂ ಘೋಷಣೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವಿತರಣೆ, 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಾಲಮಿತಿ ನಿಗದಿ, ಬೆಂಗಳೂರಿನ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲು 2 ಸಾವಿರ ಕೋಟಿ ರೂ.ಗಳ ಯೋಜನೆ, ಪ್ರಜಾಸೇವೆ ಸಚಿವಾಲಯ ಆರಂಭ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿರುವುದನ್ನು ಸರ್ಕಾರ ಪ್ರಸ್ತಾಪಿಸಿದೆ. ಪ್ರಮುಖವಾಗಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಜಾರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಲಾಗಿದೆ.
ಆಡಳಿತ ಸುಧಾರಣೆಗೆ ಒತ್ತು
ರಾಜ್ಯದ ಎಲ್ಲ ಪಂಚಾಯಿತಿಗಳು ಹಾಗೂ ವಾರ್ಡ್‌ಗಳಲ್ಲಿ ಭಾರತ್ ಜೋಡೋ ಯುವಕರ ಸಂಘ ಸ್ಥಾಪನೆ, 2,500 ಚದರ ಅಡಿವರೆಗಿನ ನೂತನ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಒಸಿ ವಿನಾಯಿತಿ, ರಾಜ್ಯಾದ್ಯಂತ ಬಿ ಖಾತಾದಿಂದ ಎ ಖಾತೆಗೆ ಪರಿವರ್ತನೆಗೆ ಕ್ರಮ ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಖಾಸಗಿ ವಲಯದ ಉದ್ಯೋಗ ವಿನಿಮಯ ಕೇಂದ್ರ ಸ್ಥಾಪನೆ, 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆರು ತಿಂಗಳ ಗಡುವು, ಶಾಸಕರು ಹಾಗೂ ಸಚಿವರ ಒತ್ತಡಕ್ಕೆ ಮಣಿಯದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಗ್ಯಾರಂಟಿ ಯೋಜನೆಗಳು ಕರ್ನಾಟಕದ ನಿವಾಸಿಗಳಿಗೆ ಮಾತ್ರ ತಲುಪುವಂತೆ ಹಾಗೂ ಸೋರಿಕೆಯನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ. ರೌಡಿಗಳ ನಿಗ್ರಹಕ್ಕೆ ಜಿಲ್ಲೆಗೊಂದು ವಿಶೇಷ ಪಡೆ ರಚನೆ, ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ದೂರವಾಣಿ ವ್ಯವಸ್ಥೆ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಬೆಳಗ್ಗೆ 10 ಗಂಟೆಗೆ ಸಿಬ್ಬಂದಿ ಹಾಜರಾತಿ ಖಚಿತಪಡಿಸಲು ಜಿಪಿಎಸ್ ಆಧರಿತ ವ್ಯವಸ್ಥೆ ಜಾರಿಗೊಳಿಸುವ ಮೂಲಕ ಆಡಳಿತ ಸುಧಾರಣೆಗೆ ಒತ್ತು ನೀಡಲಾಗಿದೆ.
ರೈತರು, ಬರ ನಿರ್ವಹಣೆಗೆ ಆದ್ಯತೆ
ಜನಸಾಮಾನ್ಯರನ್ನು ಕಾಡಿಸುತ್ತಿದ್ದ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನೂತನ ಸಿಎಸ್‌ಆರ್ ನೀತಿ ರೂಪಿಸಲು ಆದ್ಯತೆ ನೀಡುವುದರ ಜೊತೆಗೆ ರೈತರು ಹಾಗೂ ಬರ ನಿರ್ವಹಣೆಗೆ ವಿಶೇಷ ಒತ್ತು ನೀಡಲಾಗಿದೆ.
ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ ಹಾಗೂ ಗೊಬ್ಬರ ಪೂರೈಸಲು ವ್ಯವಸ್ಥೆ ಮಾಡಲಾಗಿದೆ.
ಮೊದಲ ಹಂತದಲ್ಲಿ 102 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯ ಪರಿಶೀಲನೆ ನಡೆಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಸಲು ಕ್ಷೇತ್ರಗಳಿಗೆ ತಲಾ 1 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಲಾಗಿದೆ. ಮಾವು ಬೆಳೆಗಾರರಿಗೆ ಹಿಂದಿನ ವರ್ಷದಂತೆ ಪ್ರೋತ್ಸಾಹಧನ ಮುಂದುವರಿಸಲು ನಿರ್ಧರಿಸಲಾಗಿದ್ದು, ಬೆಳೆ ವಿಮೆ ಬಾಕಿ ಬಿಡುಗಡೆಗೂ ಕ್ರಮ ಕೈಗೊಳ್ಳಲಾಗಿದೆ.
ಶಿಕ್ಷಣ, ಉದ್ಯೋಗಕ್ಕೆ ಆದ್ಯತೆ
ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಕ್ಕೂ ಸರ್ಕಾರ ಆದ್ಯತೆ ನೀಡಿದೆ. 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಗ್ರಾಮೀಣ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5ರಷ್ಟು ಮೀಸಲಾತಿ ಕಲ್ಪಿಸುವ ಘೋಷಣೆ ಮಾಡಲಾಗಿದೆ.
ರಾಜ್ಯದ 3,145 ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸುವ ‘ವಿದೇಶದಲ್ಲಿ ಅಧ್ಯಯನ-2026’ ಯೋಜನೆಗೆ ಚಾಲನೆ ನೀಡಲಾಗಿದೆ. ಎಲ್ಲ ಶಾಲೆಗಳಲ್ಲಿ 6ನೇ ತರಗತಿಯಿಂದ ಎಐ ಶಿಕ್ಷಣ ಪರಿಚಯಿಸುವುದು, ಎಐ ಅಕ್ಷರ ಅಭಿಯಾನ ಹಾಗೂ ಕೋಡಿಂಗ್ ಗುರುಕುಲ ಆರಂಭಿಸುವ ಯೋಜನೆಯನ್ನೂ ಪ್ರಕಟಿಸಲಾಗಿದೆ.
ಬೆಂಗಳೂರಿನ ಅಭಿವೃದ್ಧಿಗೆ ಹಲವು ಯೋಜನೆ
ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. 117 ಕಿ.ಮೀ. ಬೆಂಗಳೂರು ಬಿಸಿನೆಸ್ ಕಾರಿಡಾರ್ ರಿಂಗ್ ರಸ್ತೆ ಯೋಜನೆ, ಐದು ಹೊಸ ಕಮಿಷನರೇಟ್‌ಗಳ ಸ್ಥಾಪನೆ, ಐದು ಬೃಹತ್ ವೃಕ್ಷೋದ್ಯಾನಗಳ ನಿರ್ಮಾಣ ಹಾಗೂ ಏಳು ಪ್ರಮುಖ ಕೆರೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ ಸ್ಥಾಪಿಸುವ ಘೋಷಣೆಯನ್ನೂ ಮಾಡಲಾಗಿದೆ. ಬಿಯಾಂಡ್ ಬೆಂಗಳೂರು ಅಭಿವೃದ್ಧಿಗೂ ಸರ್ಕಾರ ಒತ್ತು ನೀಡಿದೆ.
ನೀರಾವರಿ ಯೋಜನೆಗಳಿಗೆ ಒತ್ತು
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಣ್ಣು ಪರೀಕ್ಷೆ ಹಾಗೂ ಸಮೀಕ್ಷೆ ನಡೆಸಲು ರಾಜ್ಯ ವನ್ಯಜೀವಿ ಮಂಡಳಿಯಿಂದ ಅನುಮತಿ ನೀಡಲಾಗಿದೆ. ಮುಂದಿನ ಹಂತವಾಗಿ ಕೇಂದ್ರ ವನ್ಯಜೀವಿ ಮಂಡಳಿಯ ಅನುಮತಿಗೆ ಶಿಫಾರಸು ಮಾಡಲಾಗಿದೆ. ತುಂಗಭದ್ರಾ ಅಣೆಕಟ್ಟಿನ ನೂತನ ಸ್ಪಿಲ್‌ಗೇಟ್‌ಗಳ ಉದ್ಘಾಟನೆ, ಅಣೆಕಟ್ಟಿನಲ್ಲಿ ಹೂಳು ತೆಗೆಯಲು ಕೇಂದ್ರದಿಂದ ಯೋಜನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 112 ಪ್ರಮುಖ ಜಲಸಂಪನ್ಮೂಲ ಯೋಜನೆಗಳಿಗೆ 16 ಸಾವಿರ ಕೋಟಿ ರೂ.ಗಳ ಅನುಮೋದನೆ ನೀಡಲಾಗಿದೆ.
2028ಕ್ಕೆ ನಶೆ ಮುಕ್ತ ಕರ್ನಾಟಕ ಗುರಿ
2028ರ ವೇಳೆಗೆ ನಶೆ ಮುಕ್ತ ಕರ್ನಾಟಕ ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಅಮಲು ಬೆರೆಸುವ ಪಾನ್ ಮಸಾಲ ಹಾಗೂ ಗುಟ್ಕಾ ನಿಷೇಧದ ಕುರಿತು ಎಚ್ಚರಿಕೆ ನೀಡಲಾಗಿದ್ದು, ಡ್ರಗ್ಸ್ ಜಾಲದ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನ ನೀಡಲು ನಿರ್ಧರಿಸಲಾಗಿದೆ.
ದಸರಾಕ್ಕೆ ಹೊಸ ಮೆರಗು
ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ದಸರಾ ಸಂದರ್ಭದಲ್ಲಿ ಏರ್ ಶೋ, ಡ್ರೋನ್ ಶೋ ಹಾಗೂ ವಿವಿಧ ಸೇನಾ ಪಡೆಗಳ ಟ್ಯಾಬ್ಲೊ ಪ್ರದರ್ಶನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ವಿದೇಶಿ ರಾಯಭಾರಿಗಳಿಗೆ ಆಹ್ವಾನ ನೀಡುವುದರ ಜೊತೆಗೆ ವಿವಿಧ ರಾಜ್ಯಗಳ ಕಲಾ ತಂಡಗಳ ಪ್ರದರ್ಶನಕ್ಕೂ ಅವಕಾಶ ಕಲ್ಪಿಸುವ ಯೋಜನೆ ರೂಪಿಸಲಾಗಿದೆ.
2047ರ ಕರ್ನಾಟಕದ ನೀಲನಕ್ಷೆ
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಭವಿಷ್ಯದ ಅಭಿವೃದ್ಧಿಯ ನೀಲನಕ್ಷೆಯನ್ನು ಪ್ರಕಟಿಸಲಾಗಿದೆ. 2047ರ ವೇಳೆಗೆ ಕರ್ನಾಟಕದ ಆರ್ಥಿಕತೆಯನ್ನು 3 ಟ್ರಿಲಿಯನ್ ಡಾಲರ್‌ಗೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ.
ಮುಂದಿನ ಎರಡು ವರ್ಷಗಳಲ್ಲಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿ, ಎಐ ಹಬ್‌ಗಳ ಸ್ಥಾಪನೆ, ರೈತರಿಗಾಗಿ ಮುಖ್ಯಮಂತ್ರಿ ರೈತ ಚೈತನ್ಯ ಯೋಜನೆ ಹಾಗೂ ಸಣ್ಣ ರೈತರಿಗೆ ರೈತ ಮಿತ್ರ ಕಾರ್ಯಕ್ರಮ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಲಾಗಿದೆ.
ಒಟ್ಟಾರೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 100 ದಿನಗಳ ಆಡಳಿತ ಅವಧಿಯಲ್ಲಿ ಆಡಳಿತ ಸುಧಾರಣೆ, ಉದ್ಯೋಗ, ಶಿಕ್ಷಣ, ರೈತರು, ನೀರಾವರಿ, ಬೆಂಗಳೂರು ಅಭಿವೃದ್ಧಿ, ಕೃತಕ ಬುದ್ಧಿಮತ್ತೆ ಹಾಗೂ ಕೈಗಾರಿಕಾ ಹೂಡಿಕೆಗೆ ಒತ್ತು ನೀಡಲಾಗಿದೆ ಎಂದು ಸರ್ಕಾರದ ಮಾಹಿತಿ ತಿಳಿಸಿದೆ.
