Homeರಾಜ್ಯದೆಹಲಿಯಲ್ಲಿ ಬೆಳಗಾವಿ ಶಾಸಕ ಅಭಯ್‌ ಪಾಟೀಲ್‌ ಕಾರು ಅಪಘಾತ

ದೆಹಲಿಯಲ್ಲಿ ಬೆಳಗಾವಿ ಶಾಸಕ ಅಭಯ್‌ ಪಾಟೀಲ್‌ ಕಾರು ಅಪಘಾತ

Belagavi MLA Abhay Patil injured in Delhi car accident, out of danger

ನವದೆಹಲಿ, ಆ.24- ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರು ಪ್ರಯಾಣಿಸುತ್ತಿದ್ದ ಕಾರು ದೆಹಲಿಯಲ್ಲಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಶಾಸಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ದೆಹಲಿಯ ಐಟಿಒ ಪ್ರದೇಶದ ಪಿಡಬ್ಲ್ಯೂಡಿ ಕಚೇರಿ ಬಳಿ ರಾತ್ರಿ ಸುಮಾರು 9.30ರ ವೇಳೆಗೆ ಅಪಘಾತ ಸಂಭವಿಸಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಅಭಯ್ ಪಾಟೀಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದೆಹಲಿ ಆಪ್ ಶಾಸಕ ಅನಿಲ್ ಝಾ ಅವರಿಗೂ ಗಾಯಗಳಾಗಿವೆ. ಸದ್ಯ ಅಭಯ್ ಪಾಟೀಲ್ ಅವರನ್ನು ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಪ್ರಕಾರ, ಅಶುತೋಷ್ ಪಾಂಡೆ ಎಂಬುವರು ಚಲಾಯಿಸುತ್ತಿದ್ದ ಸ್ವಿಫ್ಟ್ ಕಾರು ವಿರುದ್ಧ ದಿಕ್ಕಿನಲ್ಲಿ ಬಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ಕಳೆದುಕೊಂಡ ಕಾರು ಶಾಸಕರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸ್ವಿಫ್ಟ್ ಕಾರಿನಲ್ಲಿದ್ದ ಚಾಲಕ ಅಶುತೋಷ್, ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಸಹ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ದೆಹಲಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES
spot_img

Latest News