ನವದೆಹಲಿ, ಆ.24- ನಾಳೆಯಿಂದ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 9 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಕರ್ನಾಟಕಕ್ಕೆ ಆದೇಶಿಸಿದೆ.ನವದೆಹಲಿಯಲ್ಲಿ ಇಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆ ಬೆಳಗ್ಗೆ 8 ಗಂಟೆಯಿಂದ ನೀರು ಹರಿಸುವಂತೆ ಪ್ರಾಧಿಕಾರದ ಅಧ್ಯಕ್ಷರು ಕರ್ನಾಟಕಕ್ಕೆ ಸೂಚಿಸಿದ್ದಾರೆ.
ಈಗಾಗಲೇ ಕೆಆರ್ಎಸ್, ಕಬಿನಿ ಸೇರಿದಂತೆ ರಾಜ್ಯದ ಹಲವು ಜಲಾಶಯಗಳಿಂದ 30 ಟಿಎಂಸಿಗೂ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ. ಇದರ ನಡುವೆಯೇ ಮತ್ತೆ 15 ದಿನಗಳ ಕಾಲ 9 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿರುವುದು ರಾಜ್ಯದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ನಾಲೆಗಳಿಗೆ ನೀರು ಬಿಡದೆ ಬೆಳೆ ಬೆಳೆಯಲು ರೈತರಿಗೆ ಅವಕಾಶ ನೀಡದ ಸರ್ಕಾರ, ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಂಡ್ಯ, ಮೈಸೂರು, ಹಾಸನ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಹಲವು ಭಾಗಗಳಲ್ಲಿ ರೈತರು ಪ್ರಾಧಿಕಾರದ ಆದೇಶವನ್ನು ವಿರೋಧಿಸಿದ್ದು, ನೀರು ಹರಿಸುವ ನಿರ್ಧಾರ ಅವೈಜ್ಞಾನಿಕವಾಗಿದೆ ಎಂದು ಖಂಡಿಸಿದ್ದಾರೆ. ರಾಜ್ಯದ ರೈತರ ಹಿತವನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಒತ್ತಾಯಿಸಿದ್ದಾರೆ.
