Homeರಾಜ್ಯಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿರುವ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿರುವ ಮಳೆ

ಬೆಂಗಳೂರು, ಆ.25- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಚದುರಿದಂತೆ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.

ವಾಯುಭಾರ ಕುಸಿತದ ಪರಿಣಾಮ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಹಲವೆಡೆ ಆಗಾಗ್ಗೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲವೆಡೆ ಹಗುರ ಮಳೆಯಾಗಲಿದೆ.

ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಮುಂಗಾರು ಚೇತರಿಸಿಕೊಂಡಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಮತ್ತು ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

179 ತಾಲ್ಲೂಕುಗಳಲ್ಲಿ ಮಳೆ ಕೊರತೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಇದುವರೆಗೆ ವಾಡಿಕೆಗಿಂತ ಕಡಿಮೆಯಾಗಿದೆ. ಜೂನ್‌ನಲ್ಲಿ ಶೇ.42, ಜುಲೈನಲ್ಲಿ ಶೇ.29 ಹಾಗೂ ಆಗಸ್ಟ್‌ನಲ್ಲಿ ಇದುವರೆಗೆ ಶೇ.20ರಷ್ಟು ವಾಡಿಕೆಗಿಂತ ಮಳೆ ಕೊರತೆಯಾಗಿದೆ. ಇದರಿಂದ ರಾಜ್ಯದ ಹಲವು ಭಾಗಗಳಲ್ಲಿ ಬರದ ಛಾಯೆ ಆವರಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಕೊರತೆ ಹೆಚ್ಚಾಗಿದ್ದು, ಅತಿ ಹೆಚ್ಚು ಮಳೆಯಾಗುವ ಮಲೆನಾಡು ಹಾಗೂ ಕರಾವಳಿ ಭಾಗದಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆಗಸ್ಟ್‌ನಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.40ಕ್ಕೂ ಹೆಚ್ಚು ಮಳೆ ಕೊರತೆಯಾಗಿದ್ದು, ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಬರಪೀಡಿತ ತಾಲ್ಲೂಕುಗಳನ್ನು ಗುರುತಿಸಿದ್ದು, ಇನ್ನೊಂದು ವಾರದಲ್ಲಿ ಅಧಿಕೃತವಾಗಿ ಬರ ಘೋಷಿಸುವ ಸಾಧ್ಯತೆಯಿದೆ.

ಜೂನ್‌ 1ರಿಂದ ಇದುವರೆಗೆ ರಾಜ್ಯದ 189 ತಾಲ್ಲೂಕುಗಳಲ್ಲಿ ಮಳೆ ಕೊರತೆಯಾಗಿದೆ. ಜೂನ್‌ನಲ್ಲಿ 151 ತಾಲ್ಲೂಕುಗಳಲ್ಲಿ ಹಾಗೂ ಜುಲೈ ಮತ್ತು ಆಗಸ್ಟ್‌ನಲ್ಲಿ 174 ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

RELATED ARTICLES
spot_img

Latest News