ಬೆಂಗಳೂರು,ಸೆ.10- ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ವೇಗ ನೀಡುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.
ರಾಜಾಜಿನಗರ ಹಾಗೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಾರ್ವಜನಿಕರಿಗೆ ಉಚಿತ ಉಪಾಹಾರ ಹಾಗೂ ಸಿಹಿ ವಿತರಿಸಲಾಯಿತು.
ಸ್ವಾತಿ ಹೋಟೆಲ್ ಬ್ರಿಡ್‌್ಜ ಸಮೀಪದ ವಿಶ್ವಗುರು ಬಸವಣ್ಣನವರ ಪ್ರತಿಮೆ ಬಳಿ ಹಾಗೂ ಇಂದಿರಾ ಕ್ಯಾಂಟೀನ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್‌ರವರು, ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿದೆ ಎಂದು ಹೇಳಿದರು.
ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಹೊಸ ವೇಗ ನೀಡಿದ್ದು, ಆಡಳಿತದ ಚುರುಕುತನದಿಂದ ರಾಜ್ಯದತ್ತ ಇಡೀ ದೇಶ ಗಮನ ಹರಿಸುವಂತಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕೇಶವ್, ಜಿ. ಜನಾರ್ಧನ್, ಬ್ಲಾಕ್ ಅಧ್ಯಕ್ಷ ಆಪಲ್ ನಾಗರಾಜ್, ಸುಧಾಕರ್, ಪರಿಸರ ರಾಮಕೃಷ್ಣ, ಮುರುಳಿ, ಉಮೇಶ್, ಪುಟ್ಟರಾಜು, ಮಾಧವಹನೂರು, ಪ್ರವೀಣ್, ಸಾಯಿ ನವೀನ್, ಕಿಶೋರ್, ಅಜಯ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
