ಹೈದರಾಬಾದ್, ಆ.26 (ಪಿಟಿಐ)- ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿಯ ಕೊಡಾಡ್ ಮಂಡಲದಲ್ಲಿ ಇಂದು ಬೆಳಿಗ್ಗೆ 5.15ರ ಸುಮಾರಿಗೆ ಅಪಘಾತ ಸಂಭವಿಸಿದೆ. ಹೈದರಾಬಾದ್‌ನಿಂದ ಆಂಧ್ರಪ್ರದೇಶದ ಏಲೂರಿಗೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್, ಮುಂದೆ ಸಾಗುತ್ತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಅಪಘಾತದಲ್ಲಿ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಗಾಯಗೊಂಡ 12 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಂಧ್ರಪ್ರದೇಶದ ವಿಜಯವಾಡದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಸೂರ್ಯಪೇಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ನರಸಿಂಹ ತಿಳಿಸಿದ್ದಾರೆ.
ಟ್ರಕ್ ಕೈಗಾರಿಕಾ ಉದ್ದೇಶಗಳಿಗೆ ಬಳಸುವ ಭಾರಿ ಗಾತ್ರದ ಕಂಬಗಳನ್ನು ಸಾಗಿಸುತ್ತಿತ್ತು. ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಾಗ ಕಂಬಗಳನ್ನು ಭದ್ರಪಡಿಸಲು ಕಟ್ಟಲಾಗಿದ್ದ ಸರಪಳಿ ತುಂಡಾಗಿ ಬಸ್‌ನ ಬಲಭಾಗಕ್ಕೆ ಅಪ್ಪಳಿಸಿದೆ. ಇದರಿಂದ ಮುಂಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಪ್ರಾಥಮಿಕ ತನಿಖೆಯ ಪ್ರಕಾರ ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬಸ್ ಡಿಕ್ಕಿ ಹೊಡೆಯುವ ಮೊದಲು ಟ್ರಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿರುವ ಸಾಧ್ಯತೆಯೂ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
