ಬೆಂಗಳೂರು, ಆ.27-ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿ ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಮೆಗಾ ಜ್ಯೂವೆಲರಿ ಪಾರ್ಕ್ ಸ್ಥಾಪಿಸಲು 50 ಎಕರೆ ಜಮೀನು ಮಂಜೂರು ಮಾಡುವಂತೆ ಕೋರಿ ವಿಧಾನ ಪರಿಷತ್ತಿನ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಟಿ.ಎ. ಶರವಣ ಅವರು ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶರವಣ ಅವರು, 2022-23ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮೆಗಾ ಜ್ಯೂವೆಲರಿ ಪಾರ್ಕ್ ಸ್ಥಾಪಿಸುವ ಕುರಿತು ಘೋಷಣೆ ಮಾಡಲಾಗಿತ್ತು. ಆದರೆ, ಇದುವರೆಗೆ ಯೋಜನೆ ಕಾರ್ಯಗತವಾಗದಿರುವುದು ವಿಷಾದನೀಯವಾಗಿದೆ ಎಂದು ತಿಳಿಸಿದರು.
ಈ ಹಿಂದೆ ಜ್ಯೂವೆಲರಿ ಪಾರ್ಕ್ ಸ್ಥಾಪನೆಗಾಗಿ ಜಮೀನು ಮಂಜೂರು ಮಾಡುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಗೆ ಸೂಕ್ತ ಕ್ರಮಕ್ಕಾಗಿ ಸೂಚಿಸಲಾಗಿದ್ದರೂ ಇದುವರೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಮೆಗಾ ಜ್ಯೂವೆಲರಿ ಪಾರ್ಕ್ ಸ್ಥಾಪನೆಯಾದಲ್ಲಿ ರಾಜ್ಯಕ್ಕೆ ಸಾವಿರಾರು ಕೋಟಿ ರೂಪಾಯಿ ಜಿಎಸ್‌ಟಿ ದೊರೆಯುವುದರ ಜೊತೆಗೆ, ಸುಮಾರು 5 ಲಕ್ಷ ಉದ್ಯಮಿಗಳಿಗೆ ಹಾಗೂ 10 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿದೆ ಎಂದು ಅವರು ವಿವರಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣಹೊಸಹಳ್ಳಿ ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಮೆಗಾ ಜ್ಯೂವೆಲರಿ ಪಾರ್ಕ್ ಸ್ಥಾಪಿಸಲು ಅಗತ್ಯವಿರುವ 50 ಎಕರೆ ಜಮೀನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸೂಕ್ತ ನಿರ್ದೇಶನ ನೀಡಬೇಕು ಎಂದು ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
