ಬೆಂಗಳೂರು, ಆ.27- ಈದ್ ಮಿಲಾದ್ ಹಬ್ಬದ ಸಂಭ್ರಮ ಹಾಗೂ ಮೆರವಣಿಗೆ ಸಂದರ್ಭದಲ್ಲಿ ವಿದೇಶಿ ಧ್ವಜಗಳನ್ನು ಪ್ರದರ್ಶಿಸಿದ ವ್ಯಕ್ತಿಗಳ ವಿರುದ್ಧ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ‘ಈ ಸಂಜೆಗೆ’ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಪಟ್ಟಣದಲ್ಲಿ ನಿನ್ನೆ ಈದ್ ಮಿಲಾದ್ ಹಬ್ಬದ ಅಂಗವಾಗಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಕೆಲವರು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಧ್ವಜವನ್ನು ವಶಕ್ಕೆ ಪಡೆದು, ಸಂಬಂಧಪಟ್ಟವರಿಗೆ ಎಚ್ಚರಿಕೆ ನೀಡಿದ್ದಾರೆ. ಬಳಿಕ ಮೆರವಣಿಗೆ ಶಾಂತಿಯುತವಾಗಿ ಮುಂದುವರಿಯಲು ಅವಕಾಶ ಮಾಡಿಕೊಟ್ಟು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಪುಡುಚಿ ಪಟ್ಟಣದ ಹೊರವಲಯದಲ್ಲಿ ಇರಾನ್ ದೇಶದ ಧ್ವಜ ಹಾರಾಡುತ್ತಿರುವುದು ಎರಡು ದಿನಗಳ ಹಿಂದೆ ಬೆಳಕಿಗೆ ಬಂದಿತ್ತು. ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಧ್ವಜವನ್ನು ತೆರವುಗೊಳಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡೂ ಪ್ರಕರಣಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಧ್ವಜಗಳನ್ನು ಪ್ರದರ್ಶಿಸಿದವರ ಉದ್ದೇಶ ಹಾಗೂ ಘಟನೆಯ ಹಿಂದಿರುವ ಕಾರಣಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
