ಬೆಂಗಳೂರು, ಆ.27- ಸರ್ಕಾರಿ ಸೇವೆಯಲ್ಲಿದ್ದುಕೊಂಡು ಸೇವಾ ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದ ಸುಮಾರು 9 ತಿಂಗಳ ಬಳಿಕ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ಹುಣಸಗಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ್ ಜೋಶಿ ಹಾಗೂ ಕುಪ್ಪಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾಸಾಹೇಬ್ ದೇಶಮುಖ್ ಅಮಾನತುಗೊಂಡವರು.
ಅಂಬೇಡ್ಕರ್ ಸ್ವಾಭಿಮಾನಿ ಸೇನೆ ನೀಡಿದ ದೂರು ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪತ್ರದ ಆಧಾರದ ಮೇಲೆ ಯಾದಗಿರಿ ಡಿಡಿಪಿಐ ಚನ್ನಬಸಪ್ಪ ಮುದೋಳ್ ಅವರು ಈ ಆದೇಶ ಹೊರಡಿಸಿದ್ದಾರೆ.
ಆರ್ಎಸ್ಎಸ್ ಶತಮಾನೋತ್ಸವದ ಅಂಗವಾಗಿ ಕಳೆದ ವರ್ಷ ನವೆಂಬರ್ನಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಬೃಹತ್ ಪಥಸಂಚಲನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಹುಣಸಗಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ್ ಜೋಶಿ ಹಾಗೂ ಕುಪ್ಪಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾಸಾಹೇಬ್ ದೇಶಮುಖ್ ಸಕ್ರಿಯವಾಗಿ ಭಾಗವಹಿಸಿದ್ದರು ಎನ್ನಲಾಗಿದೆ.
ಸರ್ಕಾರಿ ನೌಕರರು ಯಾವುದೇ ರಾಜಕೀಯ ಅಥವಾ ಸಿದ್ಧಾಂತ ಆಧಾರಿತ ಸಂಘಟನೆಗಳ ಚಟುವಟಿಕೆಗಳು ಹಾಗೂ ಪಥಸಂಚಲನಗಳಲ್ಲಿ ಪಾಲ್ಗೊಳ್ಳಬಾರದು ಎಂಬ ಸೇವಾ ನಿಯಮವಿದೆ. ಇದನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಮುಖಂಡರು ನಿರಂತರವಾಗಿ ದೂರುಗಳನ್ನು ಸಲ್ಲಿಸಿದ್ದರು.
ಈ ಕುರಿತು ಸಂಘಟನೆಯು ಅಂದು ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿತ್ತು. ದೂರಿನ ಗಂಭೀರತೆಯನ್ನು ಪರಿಗಣಿಸಿದ ಪ್ರಿಯಾಂಕ್ ಖರ್ಗೆ ಅವರು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು.
ದೂರು ಸಲ್ಲಿಕೆಯಾಗಿ ತಿಂಗಳುಗಳೇ ಕಳೆದರೂ ಆರಂಭದಲ್ಲಿ ಯಾವುದೇ ತಕ್ಷಣದ ಕ್ರಮ ಕೈಗೊಳ್ಳಲಾಗಿರಲಿಲ್ಲ. ಆದರೆ, ಇಲಾಖಾ ತನಿಖೆ ಹಾಗೂ ಮೇಲಧಿಕಾರಿಗಳ ಸೂಚನೆಗಳ ಬಳಿಕ ನಿಯಮ ಉಲ್ಲಂಘನೆ ಸಾಬೀತಾಗಿದೆ ಎಂಬ ಆಧಾರದ ಮೇಲೆ ಶಿಕ್ಷಣ ಇಲಾಖೆ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಇದೀಗ ಅಧಿಕೃತ ಆದೇಶ ಹೊರಡಿಸಿದೆ. ಘಟನೆ ನಡೆದು ಸುಮಾರು 9 ತಿಂಗಳ ಬಳಿಕ ಕೈಗೊಂಡಿರುವ ಈ ಕ್ರಮವು ಶೈಕ್ಷಣಿಕ ವಲಯ ಹಾಗೂ ಸ್ಥಳೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
