ನವದೆಹಲಿ, ಆ.27-ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಹಾಗೂ ಕರ್ನಾಟಕದಲ್ಲಿ ಎನ್ ಡಿಎ ಮೈತ್ರಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಚರ್ಚಿಸಿ, ಮಾರ್ಗದರ್ಶನ ಪಡೆಯಲಾಯಿತು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿ, ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವಾಲಯಗಳು ಕೈಗೊಂಡಿರುವ ಪರಿವರ್ತನಾತ್ಮಕ ಕ್ರಮಗಳನ್ನು ವಿವರಿಸಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿಗಳು ತೋರಿದ ಪ್ರೀತಿ, ವಿಶ್ವಾಸಕ್ಕೆ ನಾವು ಅಭಾರಿಯಾಗಿದ್ದೇವೆ ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರ ನಿಖಿಲ್ ಕುಮಾರಸ್ವಾಮಿ ಅವರು ಇದ್ದರು. ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ರಾಜ್ಯ ಉಸ್ತುವಾರಿ ಹಾಗೂ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಧಾಮೋಹನ್ ದಾಸ್ ಅಗರವಾಲ್ ಅವರೊಂದಿಗೆ ಉಭಯ ಪಕ್ಷಗಳ ಸಮನ್ವಯ ಹಾಗೂ ಮುಂಬರುವ ಚುನಾವಣೆಯ ಬಗ್ಗೆ ಸಮಾಲೋಚನೆ ನಡೆಸಿದ್ದರು.
