ಬೆಂಗಳೂರು,ಸೆ.13- ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಗಣೇಶೋತ್ಸವ ಆಚರಣೆಯ ವೇಳೆ ಪೊಲೀಸರು ವಿಧಿಸಿರುವ ಷರತ್ತು ಹಾಗೂ ಯುವಕರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಇನ್್ಸಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ತುಷ್ಟಿಕರಣ ರಾಜಕಾರಣದ ಫರ್ಮಾನಿನಿಂದ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೇ ಎಂದು ಪ್ರಶ್ನಿಸಿರುವ ಜೋಶಿ, ಸನಾತನ ಸಂಸ್ಕೃತಿಯ ಆಚರಣೆಗೆ ಅಡ್ಡಿಪಡಿಸಿದರೆ ಸಹಿಸುವುದಿಲ್ಲ ಎಂದು ಎಕ್್ಸ(ಟ್ವಿಟರ್) ಮೂಲಕ ಖಂಡಿಸಿದ್ದಾರೆ.ಭಕ್ತಿಭಾವದಿಂದ ಹಬ್ಬ ಆಚರಿಸಲು ಮುಂದಾದ ಯುವಕರಿಗೆ ಸಾರ್ವಜನಿಕವಾಗಿ ಪೊಲೀಸ್ ಅಧಿಕಾರಿಯೊಬ್ಬರು ಬೆದರಿಕೆ ಹಾಕಿರುವುದು ಅಕ್ಷಮ್ಯ ಎಂದು ಹೇಳಿದ್ದಾರೆ.
ಅಧಿಕಾರಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಗಣೇಶೋತ್ಸವದಂತಹ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸುವ ಪ್ರಯತ್ನವನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದು ಹೇಳಿರುವ ಜೋಶಿ, ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿ ಮತ್ತು ತುಷ್ಟಿಕರಣದ ರಾಜಕಾರಣದ ಮೇಲೂ ಪ್ರಶ್ನೆಗಳನ್ನು ಎತ್ತಿದ್ದಾರೆ.
ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆಯ ಪೂರ್ವಭಾವಿ/ಆಚರಣಾ ಸಂದರ್ಭದಲ್ಲಿ ಕಾನೂನು-ಸುವ್ಯವಸ್ಥೆಯ ನೆಪ ಒಡ್ಡಿ ಇನ್ಸ್ ಪೆಕ್ಟರ್ ಧನಂಜಯ್ ಅವರು, ಗಣೇಶ ಸಮಿತಿಯ ಯುವಕರಿಗೆ ಸಾರ್ವಜನಿಕವಾಗಿ ಗದರಿಸಿ, ಕಾರ್ಯಕ್ರಮ ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದ್ದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದು ಸ್ಥಳೀಯ ಮಟ್ಟದಲ್ಲಿ ಹಾಗೂ ಹಿಂದೂಪರ ಸಂಘಟನೆಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, ಇನ್ನೊಮೆ ಆ ಮಾತು ಬಂದರೆ ಠಾಣೆಗೆ ನುಗ್ಗುತ್ತೇನೆ ಎಂದು ಇನ್್ಸಪೆಕ್ಟರ್ಗೆ ನೇರ ಎಚ್ಚರಿಕೆ ನೀಡಿದ್ದಾರೆ.
