ಬೆಂಗಳೂರು, ಆ.28- ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದಾರೆಂದು ಹೇಳಲಾಗಿದ್ದ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಇಂದು ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.ಗ್ಯಾನೇಂದ್ರ ಕುಮಾರ್ ಅವರು ನಿನ್ನೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅವರು ಗೈರಾಗಿದ್ದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಈ ಹಿಂದೆ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದ ಗ್ಯಾನೇಂದ್ರ ಕುಮಾರ್ ಅವರ ಅವಧಿಯಲ್ಲೇ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ನಡೆಸುತ್ತಿದ್ದು, ಇದೀಗ ಗ್ಯಾನೇಂದ್ರ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಕಳೆದ ವಾರ ಬೆಂಗಳೂರಿನಲ್ಲಿರುವ ಗ್ಯಾನೇಂದ್ರ ಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ಅವರು ಮನೆಯಲ್ಲಿ ಇರಲಿಲ್ಲ. ಅವರು ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿತ್ತು.
ಬಳಿಕ ಇ.ಡಿ. ಅಧಿಕಾರಿಗಳು ಲಖನೌದಲ್ಲಿರುವ ಗ್ಯಾನೇಂದ್ರ ಕುಮಾರ್ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದರು. ಆದರೆ ಅಲ್ಲಿಯೂ ಅವರು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಗ್ಯಾನೇಂದ್ರ ಕುಮಾರ್ ಅವರ ಪತ್ತೆ ಕುರಿತು ಹಲವು ಪ್ರಶ್ನೆಗಳು ಮೂಡಿದ್ದವು. ಇದೀಗ ಅವರು ದಿಢೀರ್ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಗ್ಯಾನೇಂದ್ರ ಕುಮಾರ್ ಅವರಿಗೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳನ್ನು ಅಧಿಕಾರಿಗಳು ಕಲೆಹಾಕುವ ಸಾಧ್ಯತೆಯಿದೆ.
