ಬೆಂಗಳೂರು, ಆ.30- ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ (KRIDL)ಯ ಮಂಗಳೂರು ವಿಭಾಗದ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಹಾಗೂ ಗುತ್ತಿಗೆದಾರರಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಮಂಗಳೂರು KRIDL ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯ್ ಹಾಗೂ ಕಿರಿಯ ಎಂಜಿನಿಯರ್ ಪ್ರಜ್ವಲ್ ಅವರ ಕರ್ತವ್ಯ ನಿರ್ವಹಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಹಾಗೂ ದೂರುಗಳು ಬಂದಿವೆ ಎಂದು ಶಾಸಕರು ಪತ್ರದಲ್ಲಿ ತಿಳಿಸಿದ್ದಾರೆ.
ವಿಶೇಷವಾಗಿ ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇಲಾಖೆಯ ಸಚಿವರಿಗೆ ಮಾಸಿಕವಾಗಿ ಹಣ ಪಾವತಿಸಬೇಕಾಗುತ್ತದೆ ಎಂದು ಹೇಳಿ, ‘KRIDL ಚಾರ್ಜ್’ ಹೆಸರಿನಲ್ಲಿ ಕಾಮಗಾರಿಯ ಮೊತ್ತದ ಶೇ.7ರಷ್ಟು ವರೆಗೆ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಪ್ರಶ್ನಿಸುವ ಗುತ್ತಿಗೆದಾರರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ದೂರುಗಳೂ ಬಂದಿವೆ. ಹೀಗಾಗಿ ಈಗಾಗಲೇ ಬಂದಿರುವ ದೂರುಗಳು ಹಾಗೂ ಆರೋಪಗಳ ಕುರಿತು ಯಾವುದೇ ಪೂರ್ವಾಗ್ರಹವಿಲ್ಲದೆ ಸಮಗ್ರ ಮತ್ತು ನಿಷ್ಪಕ್ಷಪಾತ ಇಲಾಖಾ ತನಿಖೆ ನಡೆಸಬೇಕು ಎಂದು ಅಶೋಕ್ ಕುಮಾರ್ ರೈ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಹಣದ ದುರುಪಯೋಗ ಹಾಗೂ ಇಲಾಖೆಯ ಘನತೆಗೆ ಧಕ್ಕೆ ತರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಅಥವಾ ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ತನಿಖೆಯಲ್ಲಿ ಆರೋಪಗಳು ಸಾಬೀತಾದಲ್ಲಿ ಸೇವಾ ನಿಯಮಗಳು ಹಾಗೂ ಇಲಾಖಾ ನಿಯಮಾವಳಿಗಳ ಪ್ರಕಾರ ಕಠಿಣ ಶಿಸ್ತು ಕ್ರಮ ಕೈಗೊಳ್ಳುವುದರ ಜತೆಗೆ, ಅಕ್ರಮವಾಗಿ ವಸೂಲಿ ಮಾಡಿರುವ ಹಣವನ್ನು ವಾಪಸ್ ಪಡೆದು ಕಾನೂನುಬದ್ಧ ಕ್ರಮ ಜರುಗಿಸಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ.
ಅಭಿವೃದ್ಧಿ ಕಾಮಗಾರಿಗಳಲ್ಲಿ ಪಾರದರ್ಶಕತೆ ಹಾಗೂ ಗುಣಮಟ್ಟ ಕಾಯ್ದುಕೊಳ್ಳುವುದು ಅತ್ಯಂತ ಅಗತ್ಯ. ಸಾರ್ವಜನಿಕ ಹಣದ ದುರುಪಯೋಗಕ್ಕೆ ಅವಕಾಶ ನೀಡದೆ, ಆರೋಪಗಳ ಕುರಿತು ಸರ್ಕಾರ ಕೂಡಲೇ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಅಧಿಕಾರಕ್ಕೆ ಬಂದ ಆರಂಭದಿಂದಲೂ ಭ್ರಷ್ಟಾಚಾರ ಮುಕ್ತ ಆಡಳಿತದ ಪರವಾಗಿ ಸಾರ್ವಜನಿಕವಾಗಿ ಮಾತನಾಡುತ್ತಾ ಬಂದಿದ್ದಾರೆ. 2023ರಲ್ಲಿ ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕ್ಷೇತ್ರದಲ್ಲಿ ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡುವ ಉದ್ದೇಶ ಹೊಂದಿದ್ದು, ಯಾವುದೇ ಕೆಲಸಕ್ಕಾಗಿ ಯಾರೂ ಹಣ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದರು. 2024ರಲ್ಲಿಯೂ ಅಕ್ರಮ-ಸಕ್ರಮ ಹಾಗೂ 94ಸಿ, 94ಸಿಸಿ ಹಕ್ಕುಪತ್ರ ವಿತರಣೆಯ ಸಂದರ್ಭದಲ್ಲಿ ಬಡವರ ಜಮೀನು ಸಂಬಂಧಿತ ಕೆಲಸಗಳನ್ನು ಭ್ರಷ್ಟಾಚಾರ ರಹಿತವಾಗಿ ನಡೆಸುವ ಬಗ್ಗೆ ಅವರು ಪ್ರತಿಪಾದಿಸಿದ್ದರು.
