ಹುಬ್ಬಳ್ಳಿ, ಆ.30- ಅವಳಿನಗರಿ ಹುಬ್ಬಳ್ಳಿ-ಧಾರವಾಡ ಮಹಾನಗರದ ನೂತನ ಪೊಲೀಸ್ ಆಯುಕ್ತರಾಗಿ ಭೂಷಣ ಬೊರಸೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಬೆಳಗಾವಿ ನಗರದ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೂಷಣ ಬೊರಸೆ ಅವರು ಇದೀಗ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಮಹಾರಾಷ್ಟ್ರದ ಧುಲೆ ಜಿಲ್ಲೆಯವರಾದ ಭೂಷಣ ಬೊರಸೆ ಅವರು 2009ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ)ಯಾಗಿ ವೃತ್ತಿ ಜೀವನ ಆರಂಭಿಸಿದ ಅವರು, ಕೆಮಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಹಾಗೂ ಎನ್ಐಟಿಯಲ್ಲಿ ಎಂ.ಟೆಕ್ ಪದವಿ ಪಡೆದಿದ್ದಾರೆ.
ಹೈದರಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಸಹಾಯಕ ನಿರ್ದೇಶಕ ಹಾಗೂ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಅವರು, ಬೆಂಗಳೂರಿನ ಅಪರಾಧ ತನಿಖಾ ದಳ (ಸಿಐಡಿ)ದ ಸೈಬರ್ ಕ್ರೈಂ ಮತ್ತು ಮಾದಕ ದ್ರವ್ಯ ವಿಭಾಗದಲ್ಲಿ ಡಿಐಜಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಮಂಗಳೂರು ಮತ್ತು ಮಂಡ್ಯ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಶಪಡಿಸಿಕೊಂಡ ವಾಹನಗಳ ಮೂಲ ಮಾಲೀಕರನ್ನು ಪತ್ತೆಹಚ್ಚಲು ವಿಶೇಷ ಸಾಫ್ಟ್ವೇರ್ ಅಭಿವೃದ್ಧಿಪಡಿಸಿದ್ದಕ್ಕಾಗಿ ಅವರು ಚಿನ್ನದ ಪದಕದ ಗೌರವಕ್ಕೆ ಪಾತ್ರರಾಗಿದ್ದರು. ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಸೇವೆ ಸಲ್ಲಿಸಿರುವ ಭೂಷಣ ಬೊರಸೆ ಅವರ ನೇಮಕದಿಂದ ಹುಬ್ಬಳ್ಳಿ-ಧಾರವಾಡ ಮಹಾನಗರದ ಪೊಲೀಸ್ ಆಡಳಿತಕ್ಕೆ ಮತ್ತಷ್ಟು ವೇಗ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.
