ನವದೆಹಲಿ, ಆ.31- ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಶುದ್ಧೀಕರಣ ವಿವಾದ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದ ಸ್ಥಳದಲ್ಲಿ ನಡೆದ ಶುದ್ಧೀಕರಣದ ವಿವಾದದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.
ಕೆಲ ದಿನಗಳ ಹಿಂದೆ ಹಲ್ದ್ವಾನಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿ ಭಾಷಣ ಮಾಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಅವರು ತೆರಳಿದ ನಂತರ, ಅವರು ಕುಳಿತಿದ್ದ ಹಾಗೂ ಕಾರ್ಯಕ್ರಮ ನಡೆದ ಸ್ಥಳದಲ್ಲಿ ಶುದ್ಧೀಕರಣದ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ದಲಿತ ಸಮುದಾಯಕ್ಕೆ ಸೇರಿದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿದ್ದ ಅಥವಾ ಸ್ಪರ್ಶಿಸಿದ್ದ ಸ್ಥಳವನ್ನು ಶುದ್ಧೀಕರಿಸಲಾಗಿದೆ ಎಂಬ ಆರೋಪ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಘಟನೆಯನ್ನು ಖಂಡಿಸಿದ್ದ ರಾಹುಲ್ ಗಾಂಧಿ, ದಲಿತ ಸಮುದಾಯದ ನಾಯಕ ಹಾಗೂ ಸಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಗೆ ಮಾಡಿರುವ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕೃತ್ಯದ ಹಿಂದೆ ಇರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದರು.
ಈ ಹೇಳಿಕೆಗಳ ಬೆನ್ನಲ್ಲೇ ಹಲ್ದ್ವಾನಿ ಪೊಲೀಸ್ ಠಾಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧವೇ ಎಫ್ಐಆರ್ ದಾಖಲಾಗಿದೆ. ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆ ಹಾಗೂ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂದೆಡೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧವೇ ಎಫ್ಐಆರ್ ದಾಖಲಾಗಿರುವುದು ವಿವಾದಕ್ಕೆ ಮತ್ತಷ್ಟು ರಾಜಕೀಯ ತಿರುವು ನೀಡಿದೆ.
ಹಲ್ದ್ವಾನಿ ಘಟನೆ ಇದೀಗ ರಾಜಕೀಯ ಹಾಗೂ ಸಾಮಾಜಿಕವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ವಿವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
