ಕಲಬುರಗಿ, ಸೆ.17- ಕಲ್ಯಾಣ ಕರ್ನಾಟಕ ಭಾಗದಲ್ಲಿ ಐಟಿ ಪಾರ್ಕ್ ಸ್ಥಾಪನೆ ಸೇರಿದಂತೆ 10 ಮಹತ್ವದ ಯೋಜನೆಗಳನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಘೋಷಿಸಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿಯವರು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕಾ ಬೆಳವಣಿಗೆ ಹಾಗೂ ಹೂಡಿಕೆಗೆ ವೇಗ ನೀಡಲು ಕಲ್ಯಾಣ ಕರ್ನಾಟಕ ಎಕಾನಮಿ ಮಿಷನ್ ಸ್ಥಾಪಿಸಲಾಗುವುದು. ಸೆಕ್ಷನ್ 8 ಕಂಪನಿಯಾಗಿ ರೂಪುಗೊಳ್ಳಲಿರುವ ಈ ಮಿಷನ್ ಮೂಲಕ ದೊಡ್ಡ ಪ್ರಮಾಣದ ಹೂಡಿಕೆಗಳನ್ನು ಆಕರ್ಷಿಸಿ, ಹೊಸ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದರು.
ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ಬಯೋ ಎಕಾನಮಿ ಮಿಷನ್ ಸ್ಥಾಪಿಸಲಾಗುವುದು. ತೊಗರಿ ಬೇಳೆ, ಕಮಲಾಪುರ ಬಾಳೆಹಣ್ಣು, ಒಣದ್ರಾಕ್ಷಿ ಹಾಗೂ ಸಿರಿಧಾನ್ಯ ಸೇರಿದಂತೆ ಕಲ್ಯಾಣ ಕರ್ನಾಟಕದ ಪ್ರಮುಖ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ಆದ್ಯತೆ ನೀಡಲಾಗುವುದು.
ಕಲ್ಯಾಣ ಕರ್ನಾಟಕದಲ್ಲಿ ರಕ್ತಹೀನತೆ ಸಮಸ್ಯೆ ನಿವಾರಣೆಗೆ ಮುಂದಿನ ಎರಡು ವರ್ಷಗಳ ಕಾಲ ವಿಶೇಷ ಅಭಿಯಾನ ನಡೆಸಲಾಗುವುದು. ತಪಾಸಣೆ, ತಡೆಗಟ್ಟುವಿಕೆ ಹಾಗೂ ಚಿಕಿತ್ಸೆಗೆ ಒತ್ತು ನೀಡಲಾಗಿದ್ದು, ಗರ್ಭಿಣಿಯರು, ಹದಿಹರೆಯದವರು ಮತ್ತು ಹಾಲುಣಿಸುವ ತಾಯಂದಿರಿಗೆ ವಿಶೇಷ ಗಮನ ನೀಡಲಾಗುವುದು.
ವೇಗವಾಗಿ ಬೆಳೆಯುತ್ತಿರುವ ಕಲಬುರಗಿ ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲು ಸೇಡಂ ರಸ್ತೆಯ ರಿಂಗ್ ರೋಡ್‌ನಲ್ಲಿ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ. ಹೊಸ ಪೆರಿಫೆರಲ್ ರಿಂಗ್ ರೋಡ್‌ಗೂ ಯೋಜನೆ ರೂಪಿಸಲಾಗುತ್ತಿದ್ದು, ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಇದರ ಜೊತೆಗೆ 30 ಕೋಟಿ ವೆಚ್ಚದಲ್ಲಿ ಹೊಸ ಕೆರೆ ಹಾಗೂ ಮನರಂಜನಾ ಉದ್ಯಾನವನ್ನು ಅಭಿವೃದ್ಧಿಪಡಿಸಿ, ನಗರದ ಪ್ರಮುಖ ಹಸಿರು ಮತ್ತು ಸಾರ್ವಜನಿಕ ವಿಹಾರ ತಾಣವನ್ನಾಗಿ ರೂಪಿಸಲಾಗುವುದು.
ಕಲಬುರಗಿ ಜಿಲ್ಲೆಯಲ್ಲಿ ನಿವೇಶನರಹಿತ ಕುಟುಂಬಗಳಿಗೆ 50,000 ವಸತಿ ನಿವೇಶನಗಳನ್ನು ಅಭಿವೃದ್ಧಿಪಡಿಸುವುದಾಗಿ ಘೋಷಿಸಲಾಗಿದೆ. ಎಲ್ಲರನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಯ ಭಾಗವಾಗಿ ಈ ಯೋಜನೆ ಕೈಗೊಳ್ಳಲಾಗುವುದು. ಕಲಬುರಗಿಯಲ್ಲಿ 30 ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು. ಬೆಂಗಳೂರಿನಾಚೆಗೂ ಐಟಿ ಮತ್ತು ನಾವೀನ್ಯತಾ ಕ್ಷೇತ್ರದ ಬೆಳವಣಿಗೆಯನ್ನು ವಿಸ್ತರಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ.
ಇದರ ಜೊತೆಗೆ ನಾವೀನ್ಯತೆ, ನವೋದ್ಯಮ ಹಾಗೂ ಯುವ ಉದ್ಯಮಿಗಳನ್ನು ಉತ್ತೇಜಿಸಲು ಕಲಬುರಗಿ ಸಂಶೋಧನೆ, ಅನ್ವೇಷಣೆ ಹಾಗೂ ಯುವ ವೇಗವರ್ಧಕ ಕೆ ಆರ್ ಐ ವೈ ಎ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.ಸಾರ್ವಜನಿಕ ಸುರಕ್ಷತೆ, ಅಪರಾಧ ನಿಯಂತ್ರಣ ಹಾಗೂ ಸಂಚಾರ ನಿರ್ವಹಣೆಯನ್ನು ಬಲಪಡಿಸಲು ಕಲಬುರಗಿ ನಗರ ಮತ್ತು ತಾಲೂಕು ಕೇಂದ್ರಗಳಲ್ಲಿ ಎಐ ಆಧರಿತ ಸಿಸಿಟಿವಿ ಜಾಲ ಅಳವಡಿಸಲಾಗುವುದು.
ನಗರ ಸ್ಥಳೀಯ ಸಂಸ್ಥೆಗಳ ನಾಗರಿಕ ಸೇವೆಗಳ ಮೇಲ್ವಿಚಾರಣೆ ಹಾಗೂ ತ್ಯಾಜ್ಯ ನಿರ್ವಹಣೆಯಲ್ಲಿಯೂ ಈ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.ಕಲಬುರಗಿ ಕೋಟೆ, ಶರಣಬಸವೇಶ್ವರ ದೇವಸ್ಥಾನ, ಖ್ವಾಜಾ ಬಂದೇ ನವಾಜ್ ದರ್ಗಾ, ಬುದ್ಧ ವಿಹಾರ, ಮಳಖೇಡ, ಸನ್ನತಿ ಹಾಗೂ ಗಾಣಗಾಪುರವನ್ನು ಸಂಪರ್ಕಿಸುವ ಪುಣ್ಯ ಯಾತ್ರಾ ಸರ್ಕ್ಯೂಟ್ ಅಭಿವೃದ್ಧಿಪಡಿಸಲಾಗುವುದು.
ಕೆಕೆಆರ್‌ಡಿಬಿ ಅನುದಾನದ ಮೂಲಕ ಮಳಖೇಡ, ನಾಗಾವಿ, ಕಾಳಗಿ ಹಾಗೂ ಸನ್ನತಿಯ ಪಾರಂಪರಿಕ ತಾಣಗಳ ಪುನರಾಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಗಾಣಗಾಪುರವನ್ನು ಮೊದಲ ಹಂತದಲ್ಲಿ 50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಇದೆ.ಬಸವಣ್ಣನವರ ತತ್ವಗಳು ಮತ್ತು ವಚನ ಪರಂಪರೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ಮುಂದಿನ ಎರಡು ವರ್ಷಗಳಲ್ಲಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣವನ್ನು ಆಧುನಿಕ ಕ್ರೀಡಾ ಮೂಲಸೌಕರ್ಯದೊಂದಿಗೆ ಸಮಗ್ರವಾಗಿ ಪುನರಾಭಿವೃದ್ಧಿಪಡಿಸಲಾಗುವುದು.ಕಲ್ಯಾಣ ಕರ್ನಾಟಕದಾದ್ಯಂತ ಕ್ರಿಕೆಟ್ ಸೌಲಭ್ಯಗಳನ್ನು ವಿಸ್ತರಿಸಲು ಸರ್ಕಾರವು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಜತೆ ಒಡಂಬಡಿಕೆ ಮಾಡಿಕೊಳ್ಳುವುದಾಗಿ ವಿವರಿಸಿದ್ದಾರೆ.
ಇದಲ್ಲದೆ, ಕಲಬುರಗಿ ತಾಲೂಕಿನ ಹಡಗಿಲ ಹಾರುತಿ ಗ್ರಾಮದಲ್ಲಿ ಸ್ಪೋರ್ಟ್ಸ್ ಸಿಟಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ವಿವಿಧ ಕ್ರೀಡೆಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಒಳಾಂಗಣ ಮತ್ತು ಹೊರಾಂಗಣ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.ಕಲ್ಯಾಣ ಕರ್ನಾಟಕದ ಹಸಿರು ಹೊದಿಕೆಯನ್ನು ಹೆಚ್ಚಿಸುವ ಹಾಗೂ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸುವ ಸಾಮರ್ಥ್ಯವನ್ನು ಬಲಪಡಿಸುವ ಉದ್ದೇಶದಿಂದ ಮುಂದಿನ ಎರಡು ವರ್ಷಗಳಲ್ಲಿ ಕೋಟಿ ವೃಕ್ಷ ಅಭಿಯಾನ ಕೈಗೊಳ್ಳಲಾಗುವುದು.
ಈ ಅಭಿಯಾನದಡಿ ಕಲ್ಯಾಣ ಕರ್ನಾಟಕ ಪ್ರದೇಶದಾದ್ಯಂತ ಒಂದು ಕೋಟಿ ಗಿಡಗಳನ್ನು ನೆಟ್ಟು ಪೋಷಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ. ಒಟ್ಟಾರೆ, ಕೈಗಾರಿಕೆ ಮತ್ತು ಹೂಡಿಕೆಯಿಂದ ಹಿಡಿದು ಕೃಷಿ, ಆರೋಗ್ಯ, ಶಿಕ್ಷಣ, ಐಟಿ, ಕ್ರೀಡೆ, ಪ್ರವಾಸೋದ್ಯಮ ಹಾಗೂ ಪರಿಸರದವರೆಗೆ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹಲವು ಹೊಸ ಯೋಜನೆಗಳಿಗೆ ಸರ್ಕಾರ ಒತ್ತು ನೀಡಿದೆ.
