ಬೆಂಗಳೂರು, ಸೆ.3- ಜಾಗತಿಕ ಹೂಡಿಕೆ ಮತ್ತು ವಿದೇಶಾಂಗ ವ್ಯವಹಾರಗಳ ಇಲಾಖೆ ಸ್ಥಾಪನೆ, ಪಶ್ಚಿಮ ಘಟ್ಟದ ಪ್ರದೇಶಗಳ ಜನರ ಹಿತರಕ್ಷಣೆಗೆ ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ವಿಶೇಷ ಅಧಿವೇಶನ, ಬರಪೀಡಿತ ಹೆಚ್ಚುವರಿ ತಾಲ್ಲೂಕುಗಳ ಘೋಷಣೆ ಸೇರಿದಂತೆ ಹಲವಾರು ಮಹತ್ವದ ವಿಚಾರಗಳು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿವೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ವಿಚಾರಗಳು ಚರ್ಚೆಯಾಗಿವೆ.
ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ರಾಜ್ಯದಲ್ಲಿ ಸುಮಾರು 20 ಸಾವಿರ ಚದರ ಕಿ.ಮೀ. ಪ್ರದೇಶಕ್ಕೆ ಹಾನಿಮಾಡುವ ವರದಿಯ ಶಿಫಾರಸುಗಳನ್ನು ತಿರಸ್ಕರಿಸಬೇಕು ಎಂದು ರಾಜ್ಯ ಸರ್ಕಾರ ಈಗಾಗಲೇ ಸಂಪುಟದಲ್ಲೇ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಆದರೆ ಅದನ್ನು ಮೀರಿ ಮತ್ತೆ ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಇತ್ತೀಚೆಗೆ ನಡೆದ ವಿಧಾನಮಂಡಲದ ಅಧಿವೇಶನದಲ್ಲಿ ಪಕ್ಷಾತೀತವಾಗಿ ಶಾಸಕರು ವರದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.ಗದ್ದಲದಿಂದಾಗಿ ಚರ್ಚೆ ಸಾಧ್ಯವಾಗಲಿಲ್ಲ. ಹೀಗಾಗಿ ಸೆಪ್ಟೆಂಬರ್ 21, 22 ಹಾಗೂ 23ರಂದು ಮೂರು ದಿನಗಳ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಇಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ, ರಾಜ್ಯದ ಅಭಿಪ್ರಾಯವನ್ನು ಮತ್ತೊಮೆ ಕೋರಿದೆ.
ವರದಿ ಜಾರಿಯಾದರೆ ಪಶ್ಚಿಮ ಘಟ್ಟ ಪ್ರದೇಶದ ಪರಿಸರ ಸಂರಕ್ಷಣೆ, ಅಭಿವೃದ್ಧಿ ಚಟುವಟಿಕೆಗಳು ಹಾಗೂ ಅಲ್ಲಿನ ಜನಜೀವನದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾಧಕ-ಬಾಧಕಗಳನ್ನು ಚರ್ಚಿಸುವ ಅಗತ್ಯ ಎದುರಾಗಿದೆ. ಈಗಾಗಲೇ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಎರಡನೇ ಹಂತದಲ್ಲಿ ಮತ್ತಷ್ಟು ತಾಲ್ಲೂಕುಗಳನ್ನು ಘೋಷಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಂಪುಟದಲ್ಲಿ ಚರ್ಚೆಗಳು ನಡೆಯುತ್ತಿವೆ.
