ಧಾರವಾಡ, ಸೆ.22- ಗೂಡ್ಸ್ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ-ಗದಗ ಬೈಪಾಸ್ನಲ್ಲಿ ತಡರಾತ್ರಿ ನಡೆದಿದೆ.ಮೃತರನ್ನು ಜಯರಾಜನಗರದ ನಿವಾಸಿಗಳಾದ ರಜನಿ ಹಾಗೂ ಸುಕುಮಾರ ಎಂದು ಗುರುತಿಸಲಾಗಿದೆ.
ರಜನಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ ಕೆಲಸ ಮುಗಿಸಿಕೊಂಡು ಪತಿಯೊಂದಿಗೆ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಗೂಡ್ಸ್ ವಾಹನ ಬೈಕ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದ ಕೂಡಲೇ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
