ಬೆಂಗಳೂರು, ಸೆ.6- ಬಿಎಂಡಬ್ಲ್ಯು ಆರ್ಆರ್ ಬೈಕ್ವೊಂದು ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಯುವಕ ಮೃತಪಟ್ಟಿರುವ ಘಟನೆ ದೇವನಹಳ್ಳಿ ಸಮೀಪದ ಚಿಕ್ಕಸಣ್ಣೆ ಗೇಟ್ ಸಿಗ್ನಲ್ ಬಳಿ ನಡೆದಿದೆ.ಮೃತರನ್ನು ನರಗನಹಳ್ಳಿ ಗ್ರಾಮದ ನಿವಾಸಿ ನವೀನ್ ಕುಮಾರ್ (25) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ನವೀನ್ ತಮ್ಮ ಶಿಫ್ಟ್ ಕಾರಿನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅತಿವೇಗವಾಗಿ ಬಂದ ಬಿಎಂಡಬ್ಲ್ಯು ಬೈಕ್ ಕಾರಿಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಿದೆ. ಡಿಕ್ಕಿಯ ರಭಸಕ್ಕೆ ತೀವ್ರವಾಗಿ ಗಾಯಗೊಂಡ ನವೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅಪಘಾತದ ಬಳಿಕ ಬೈಕ್ ಸವಾರ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ದೇವನಹಳ್ಳಿ ಸಂಚಾರ ಪೊಲೀಸರು ಬೈಕ್ ಹಾಗೂ ಕಾರನ್ನು ಹೆದ್ದಾರಿಯಿಂದ ತೆರವುಗೊಳಿಸಿದ್ದಾರೆ.
ಬೆಂಗಳೂರು ಮೂಲದ ಬೈಕ್ ಸವಾರನ ಪತ್ತೆಗೆ ಪೊಲೀಸರು ಮುಂದಾಗಿದ್ದು, ಆತನಿಗಾಗಿ ಶೋಧ ನಡೆಸುತ್ತಿದ್ದಾರೆ. ಬೈಕ್ ಸವಾರನ ಅತಿವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
