ಬೆಂಗಳೂರು, ಸೆ.6- ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಲಂಡನ್ಗೆ ತೆರಳುತ್ತಿದ್ದ ವರ್ಜಿನ್ ಅಟ್ಲಾಂಟಿಕ್ ವಿಮಾನವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಇಂದು ಬೆಳಗ್ಗೆ ನಡೆದಿದೆ.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 8.20ಕ್ಕೆ ವಿಮಾನ ಟೇಕ್ಆಫ್ ಆಗಿತ್ತು. ಆದರೆ, ಕೆಲವೇ ನಿಮಿಷಗಳಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ವಿಮಾನವು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ತುಮಕೂರು ಸುತ್ತಮುತ್ತಲಿನ ಆಗಸದಲ್ಲಿ ಸುತ್ತಾಡಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ವಿಮಾನವನ್ನು ಮತ್ತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಿಂತಿರುಗಿಸಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ವಿಮಾನದಲ್ಲಿದ್ದ 270 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಯಾಣಿಕರಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎನ್ನಲಾಗಿದೆ. ವಿಮಾನದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದ ನಿಖರ ಕಾರಣ ಹಾಗೂ ವಿಮಾನ ಸೇವೆ ಯಾವಾಗ ಪುನರಾರಂಭವಾಗಲಿದೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
