ಬೆಂಗಳೂರು, ಸೆ.23- ಬರಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ತಮ ಕ್ಷೇತ್ರದ ಇಂಡಿ ಮತ್ತು ಚಡಚಣ ತಾಲ್ಲೂಕುಗಳನ್ನು ಸೇರ್ಪಡೆ ಮಾಡದಿರುವುದನ್ನು ವಿರೋಧಿಸಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂಡಿ ಮತ್ತು ಚಡಚಣ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸದಿರುವುದರಿಂದ ಅಸಮಾಧಾನಗೊಂಡಿದ್ದ ಯಶವಂತರಾಯಗೌಡ ಪಾಟೀಲ್, ಇಂದು ಬೆಳಗ್ಗೆ ವಿಧಾನಸಭಾಧ್ಯಕ್ಷ ಬಿ.ಎಸ್. ಪಾಟೀಲ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು. ತಮ ಕ್ಷೇತ್ರವನ್ನು ಬರ ಘೋಷಣೆಯ ವಿಚಾರದಲ್ಲಿ ಕಡೆಗಣಿಸಲಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ಆಡಳಿತ ಪಕ್ಷದ ಶಾಸಕನಾಗಿ ನಾನು ಸರ್ಕಾರಕ್ಕೆ ಮುಜುಗರವಾಗಬಾರದು ಎಂದು ಹಲವು ಬಾರಿ ಮನವಿ ಮಾಡಿಕೊಂಡಿದ್ದೇನೆ. ಆದರೆ ನಮ ಮಾತಿಗೆ ಮತ್ತು ಭಾವನೆಗಳಿಗೆ ಬೆಲೆ ಸಿಗುತ್ತಿಲ್ಲ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಒತ್ತಡ ಹೇರುವ ಬಲಾಢ್ಯರಿಗಷ್ಟೇ ಮನ್ನಣೆ ದೊರೆಯುತ್ತಿದೆ. ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಲಾಗದೇ ಇರುವುದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಬೆಳವಣಿಗೆ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮಾಹಿತಿ ರವಾನೆಯಾಗಿದೆ. ಕೂಡಲೇ ವಿಧಾನಸಭೆಗೆ ಆಗಮಿಸಿದ ಮುಖ್ಯಮಂತ್ರಿ ಅವರು ಸದನದ ಕಲಾಪದಲ್ಲಿ ಭಾಗವಹಿಸದೆ ಮೂರನೇ ಮಹಡಿಯಲ್ಲಿರುವ ತಮ ಕಚೇರಿಗೆ ತೆರಳಿದರು.
ಬಳಿಕ ಯಶವಂತರಾಯಗೌಡ ಪಾಟೀಲ್ ಅವರನ್ನು ತಮ ಕಚೇರಿಗೆ ಕರೆಸಿಕೊಂಡು ಮಾತುಕತೆ ನಡೆಸಿದರು. ಬರ ಘೋಷಣೆಗೆ ಕೇಂದ್ರ ಸರ್ಕಾರದ ಮಾನದಂಡಗಳು ಹಾಗೂ ಇಂಡಿ ಮತ್ತು ಚಡಚಣ ತಾಲ್ಲೂಕುಗಳಲ್ಲಿನ ವಾಸ್ತವ ಪರಿಸ್ಥಿತಿಗಳ ಕುರಿತು ಮುಖ್ಯಮಂತ್ರಿ ಶಾಸಕರಿಗೆ ವಿವರಿಸಿದರು ಎನ್ನಲಾಗಿದೆ.
ದುಡುಕಿನ ನಿರ್ಧಾರ ಕೈಗೊಳ್ಳಬೇಡಿ: ಸಿಎಂ ಮನವಿ
ಬರಪೀಡಿತ ತಾಲ್ಲೂಕುಗಳ ಘೋಷಣೆ ಪ್ರಕ್ರಿಯೆ ಇಲ್ಲಿಗೆ ಮುಗಿದಿಲ್ಲ. ಮುಂದಿನ ಹಂತದಲ್ಲಿ ಇನ್ನಷ್ಟು ತಾಲ್ಲೂಕುಗಳನ್ನು ಪರಿಗಣಿಸಲಾಗುವುದು. ಆ ಸಂದರ್ಭದಲ್ಲಿ ನಿಮ ಕ್ಷೇತ್ರದ ತಾಲ್ಲೂಕುಗಳನ್ನೂ ಬರಪೀಡಿತ ಪಟ್ಟಿಗೆ ಸೇರಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ ದುಡುಕಿನ ನಿರ್ಧಾರ ಕೈಗೊಳ್ಳದೆ ರಾಜೀನಾಮೆ ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಶವಂತರಾಯಗೌಡ ಪಾಟೀಲ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.
ಇದಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತಮಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಅಸಮಾಧಾನಗೊಂಡಿದ್ದ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದರು. ಆ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಮಧ್ಯಪ್ರವೇಶಿಸಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಬಳಿಕ ವಿಜಯಪುರಕ್ಕೆ ತೆರಳಿದ್ದ ಅವರು ರಾಜೀನಾಮೆ ನಿರ್ಧಾರವನ್ನು ಕೈಬಿಡುವುದಾಗಿ ಘೋಷಿಸಿದ್ದರು.ಆ ಸಂದರ್ಭದಲ್ಲಿ ತಾವು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.
ಬರ ಘೋಷಣೆ ವಿಚಾರ ಸರ್ಕಾರಕ್ಕೆ ತಲೆನೋವು:
ರಾಜ್ಯದಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ವಿಚಾರ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಹಲವು ಆಡಳಿತ ಪಕ್ಷದ ಶಾಸಕರು ತಮ ಕ್ಷೇತ್ರಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.
ಗದಗ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸದಿದ್ದರೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್‌ನ ಹಿರಿಯ ನಾಯಕ ಹೆಚ್.ಕೆ.ಪಾಟೀಲ್, ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಮುದ್ದೇಬಿಹಾಳ ತಾಲ್ಲೂಕು ಕೂಡ ಇನ್ನೂ ಬರಪೀಡಿತ ಎಂದು ಘೋಷಣೆಯಾಗಿಲ್ಲ. ಅಲ್ಲಿನ ಶಾಸಕ ಅಪ್ಪಾಜಿ ನಾಡಗೌಡ ಅವರು ಕೂಡ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳದಿದ್ದರೆ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಹೀಗೆ ಬರಪೀಡಿತ ತಾಲ್ಲೂಕುಗಳ ಘೋಷಣೆ ವಿಚಾರದಲ್ಲಿ ಆಡಳಿತ ಪಕ್ಷದ ಶಾಸಕರಿಂದಲೇ ಒತ್ತಡ ಹೆಚ್ಚುತ್ತಿರುವುದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ. ವಿಧಾನಸಭೆಯಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಇದೊಂದು ಆತಂಕ ಕಾರಿ ವಿಷಯ. ಹೀಗೂ ಉಂಟೆಂದು ಹೇಳಿ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರ ರಾಜೀನಾಮೆಯ ಪತ್ರವನ್ನು ಓದಿದರು. ಸರ್ಕಾರಕ್ಕೆ ನಾಚಿಕೆಯಾಗಬೇಕು ಆಡಳಿತ ಪಕ್ಷದ ಶಾಸಕರೇ ರಾಜೀನಾಮೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇದು ಆಡಳಿತ ಮತ್ತು ಪ್ರತಿ ಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.
