ಬೆಂಗಳೂರು, ಸೆ.7- ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಕೆಜಿಎಫ್‌ನ ಬೇತಮಂಗಲ ಸಮೀಪದ ದೊಡ್ಡಕಾರಿ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸಿ ಶಾರದಾಬಾಯಿ (70), ಅವರ ಪುತ್ರಿ ದೀಕ್ಷಿತಾ (20), ಅಳಿಯ ದೇವೇಂದ್ರ (45) ಹಾಗೂ ಮೊಮ್ಮಗ ವಿಷ್ಣು (12) ಎಂದು ಗುರುತಿಸಲಾಗಿದೆ.
ಬೆಂಗಳೂರು ಮತ್ತು ಮೈಸೂರಿನಲ್ಲಿ ವಾಸವಾಗಿರುವ ಎರಡು ಕುಟುಂಬಗಳ ಒಟ್ಟು ಎಂಟು ಮಂದಿ ಸಂಬಂಧಿಕರು ಒಟ್ಟಾಗಿ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದು ಕಾರಿನಲ್ಲಿ ವಾಪಸ್ಸಾಗುತ್ತಿದ್ದರು. ಇಂದು ಬೆಳಗ್ಗೆ ಸುಮಾರು 6.50ರ ವೇಳೆಗೆ ದೊಡ್ಡಕಾರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ನಾಲ್ವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಬಂಗಾರಪೇಟೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ತಿಳಿದ ಬೇತಮಂಗಲ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಚಾಲಕನಿಗೆ ತೂಕಡಿಕೆ?
ಕಾರನ್ನು ಚಾಲನೆ ಮಾಡುತ್ತಿದ್ದ ವೇಳೆ ಚಾಲಕನಿಗೆ ತೂಕಡಿಕೆ ಬಂದಿರುವ ಸಾಧ್ಯತೆಯಿದ್ದು, ಇದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಪ್ರಾಥಮಿಕವಾಗಿ ಶಂಕಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.
