Homeರಾಜ್ಯ108 ಆಂಬುಲೆನ್ಸ್‌ ನೌಕರರ ಮುಷ್ಕರ : ಸೆ.20ರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

108 ಆಂಬುಲೆನ್ಸ್‌ ನೌಕರರ ಮುಷ್ಕರ : ಸೆ.20ರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು, ಸೆ.8- ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆಂಬುಲೆನ್ಸ್‌ ನೌಕರರು ಮುಷ್ಕರದ ಎಚ್ಚರಿಕೆ ನೀಡಿದ್ದಾರೆ.

ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ 15 ದಿನಗಳ ಗಡುವು ನೀಡಿರುವ ನೌಕರರ ಸಂಘಟನೆಗಳು, ಈ ಅವಧಿಯಲ್ಲಿ ಬೇಡಿಕೆಗಳು ಈಡೇರದಿದ್ದರೆ ಸೆ.20ರಿಂದ ಸಾಮೂಹಿಕ ರಾಜೀನಾಮೆ ನೀಡಿ ಹೋರಾಟ ನಡೆಸುವುದಾಗಿ ಎಚ್ಚರಿಸಿವೆ.

ಈ ಸಂಬಂಧ ಸುವರ್ಣ ಕರ್ನಾಟಕ ಆರೋಗ್ಯ ಕವಚ-108 ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಕವಚ ಆಂಬುಲೆನ್ಸ್‌ ನೌಕರರ ಸಂಘದ ಪದಾಧಿಕಾರಿಗಳು ಆರೋಗ್ಯ ಸಚಿವರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು ತಮ್ಮ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

ಜಿವಿಕೆ ಸಂಸ್ಥೆಯ ಅಧೀನದಲ್ಲಿ ಸುಮಾರು 35,000 ನೌಕರರು ಕಾರ್ಯನಿರ್ವಹಿಸುತ್ತಿದ್ದು, ಹಲವು ವರ್ಷಗಳಿಂದ ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸಿಲ್ಲ ಎಂದು ನೌಕರರು ಆರೋಪಿಸಿದ್ದಾರೆ.ನೇಮಕಾತಿ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಪ್ರತಿ ವರ್ಷ ವೇತನ ಪರಿಷ್ಕರಣೆ ಮಾಡಬೇಕಾಗಿತ್ತು. ಆದರೆ, 2017ರಿಂದ 2022ರವರೆಗೆ ಯಾವುದೇ ವೇತನ ಹೆಚ್ಚಳ ಮಾಡಲಾಗಿಲ್ಲ ಎಂದು ನೌಕರರು ತಿಳಿಸಿದ್ದಾರೆ.

ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಿಸಲು ಅಗತ್ಯವಿರುವ ಆಂಬುಲೆನ್ಸ್‌ ಸೌಲಭ್ಯ ಒದಗಿಸಬೇಕು. ವಲಯವಾರು ನಿಗದಿಪಡಿಸಿರುವ ವೇತನ ಪದ್ಧತಿ ರದ್ದುಪಡಿಸಿ ಎಲ್ಲ ನೌಕರರಿಗೂ ಏಕರೂಪ ವೇತನ ಜಾರಿಗೊಳಿಸಬೇಕು. ಜ್ಯೇಷ್ಠತೆಯ ಆಧಾರದ ಮೇಲೆ ವೇತನ ನಿಗದಿಪಡಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ.

ಕಾರ್ಮಿಕ ಇಲಾಖೆಯ ನಿಯಮದಂತೆ ಪ್ರತಿ ತಿಂಗಳ 7ನೇ ತಾರೀಖಿನೊಳಗೆ ವೇತನ ಪಾವತಿಸಬೇಕು. ಕರ್ತವ್ಯದ ವೇಳೆ ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಗಳಿಗೆ ₹50 ಲಕ್ಷ ಪರಿಹಾರ ನೀಡಬೇಕು ಎಂಬ ಬೇಡಿಕೆಯನ್ನೂ ಸಂಘಟನೆಗಳು ಮುಂದಿಟ್ಟಿವೆ.

ಈ ನಡುವೆ, ಮುಷ್ಕರದಿಂದಾಗಿ ರೋಗಿಗಳಿಗೆ ಯಾವುದೇ ತೊಂದರೆ ಉಂಟಾದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ಎಚ್ಚರಿಸಿದ್ದಾರೆ. ಚಾಲಕರು ಹಾಗೂ ನೌಕರರಿಗೆ ಯಾವುದೇ ಸಮಸ್ಯೆಗಳಿದ್ದರೆ, ಸಂಬಂಧಪಟ್ಟ ಸೇವಾ ಸಂಸ್ಥೆಯೊಂದಿಗೆ ಮಾತುಕತೆ ನಡೆಸಿ ಪರಿಹರಿಸಿಕೊಳ್ಳಬೇಕು. ಸಾರ್ವಜನಿಕರಿಗೆ ತುರ್ತು ಆರೋಗ್ಯ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದು ಸಚಿವರು ತಿಳಿಸಿದ್ದಾರೆ.

RELATED ARTICLES
spot_img

Latest News