ಬೆಂಗಳೂರು,ಮಾ.26-ಶಾಸಕ ರಾಜವೆಂಕಟಪ್ಪ ನಾಯಕ್ ನಿಧನದಿಂದ ತೆರವಾಗಿದ್ದ ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಸಚಿವ ರಾಜುಗೌಡ ನಾಯಕ್‍ಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ್ದು, ಮತ್ತೊಮ್ಮೆ ರಾಜುಗೌಡ ನಾಯಕ್‍ಗೆ ಮಣೆ ಹಾಕಿದೆ.
ಮೇ 7ರಂದು ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಜೂ.4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ. ಕಳೆದ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವೆಂಕಟಪ್ಪ ನಾಯಕ್ ವಿಜೇತರಾಗಿದ್ದರು. ಆದರೆ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಕೆಲ ದಿನಗಳ ಹಿಂದೆ ನಿಧನರಾಗಿದ್ದರು. ತೆರವಾಗಿದ್ದ ಈ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‍ನಿಂದ ವೆಂಕಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್ ಟಿಕೆಟ್ ಘೋಷಣೆ ಮಾಡಲಾಗಿದೆ.
ಬಿಜೆಪಿ, ಕಾಂಗ್ರೆಸ್ ನೇರ ಪೈಪೋಟಿ:
ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ. ಇದು ತಮ್ಮ ಕೊನೆಯ ಚುನಾವಣೆ. ಸೇವೆ ಸಲ್ಲಿಸಲು ಅವಕಾಶ ನೀಡಿ ಎಂದು ಎಂದು ವೆಂಕಟಪ್ಪ ನಾಯಕ ಪ್ರಚಾರ ಮಾಡಿದ್ದರು.25 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷ ಗೆದ್ದಿತ್ತು. ಸಚಿವರಾಗಬೇಕೆನ್ನುವ ಆಸೆ ಇತ್ತು.
ಪಕ್ಷದ ನಿಷ್ಠರಾಗಿದ್ದ ಅವರು ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ಫೆಬ್ರುವರಿ 25ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರುನಾಲ್ಕು ಬಾರಿ ಸುರಪುರ ಮತಕ್ಷೇತ್ರದಿಂದ ಆಯ್ಕೆಯಾಗಿದ್ದರು.