ನವದೆಹಲಿ, ಮಾ.26-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ತಕ್ಷಣವೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ಮುಖ್ಯ ಚುನಾವಣಾಕಾರಿಗೆ ಸೂಚನೆ ನೀಡಿದೆ.
ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರು ಮತದಾರರಿಗೆ ಉಚಿತ ಉಡುಗೊರೆಗಳನ್ನು ಹಂಚುತ್ತಿದ್ದಾರೆ. ಈ ಬಗ್ಗೆ ರಾಜ್ಯ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಆರೋಪಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಯೋಗಕ್ಕೆ ಪತ್ರ ಬರೆದಿದ್ದರು.
ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಡಿ.ಕೆ.ಸುರೇಶ್ ಉಲ್ಲಂಘಿಸಿದ್ದರೆ ತತಕ್ಷಣವೇ ಅವರ ಮೇಲೆ ಸೂಕ್ತವಾದ ಕಾನೂನು ಕ್ರಮವನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಮುಖ್ಯ ಚುನಾವಣಾ ಆಯುಕ್ತರು ಸೂಚನೆ ಕೊಟ್ಟಿದ್ದಾರೆ.
ಕಳೆದ 21ರಂದು ಆಯೋಗಕ್ಕೆ ಪತ್ರ ಬರೆದಿದ್ದ ಜೆಡಿಎಸ್ ವರಿಷ್ಠ ದೇವೇಗೌಡರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಭ್ರಷ್ಟಾಚಾರ ಚಟುವಟಿಕೆಗಳು ನಡೆಯುತ್ತಿವೆ. ಮತದಾರರಿಗೆ ಉಚಿತ ಉಡುಗೊರೆಗಳನ್ನು ಹಂಚುತ್ತಿದ್ದಾರೆ. ಈ ಕುರಿತು ನಾವು ಪತ್ರ ಬರೆದರೂ ಚುನಾವಣಾಧಿಕಾರಿಗಳು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದ್ದರು.
ಅಲ್ಲದೆ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ಚುನಾವಣಾಕಾರಿಗಳನ್ನು ತತಕ್ಷಣವೇ ವರ್ಗಾವಣೆಗೊಳಿಸಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಆಯೋಗ ಕ್ರಮ ತೆಗೆದುಕೊಳ್ಳಬೇಕೆಂದು ಗೌಡರು ಪತ್ರದಲ್ಲಿ ಮನವಿ ಮಾಡಿದ್ದರು.
ಈ ಕ್ಷೇತ್ರದಿಂದ ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಸ್ರ್ಪಧಿಸಲಿದ್ದು, ಅವರ ಮೇಲೆ ಕ್ರಮ ಜರುಗಿಸಲು ಸ್ಥಳೀಯ ಅಧಿಕಾರಿಗಳು ಹಿಂದೆಮುಂದೆ ನೋಡುತ್ತಿದ್ದಾರೆ ಎಂದು ಆಪಾದಿಸಲಾಗಿತ್ತು. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಆಯೋಗ ಡಿ.ಕೆ.ಸುರೇಶ್ ವಿರುದ್ದ ಕೇಳಿಬಂದಿರುವ ಆರೋಪಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದೆ.