ಬಾಗಲಕೋಟೆ,ಅ.8- ಪ್ರಧಾನಿ ಮೋದಿ ಅವರ ಜನಪ್ರಿಯತೆ ಮತ್ತು ದೇಶದ ಅಭಿವೃದ್ಧಿಯನ್ನು ಸಹಿಸಲಾಗದೆ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ. ಎಸ್ಐಆರ್ ವಿಚಾರವನ್ನು ಮುಂದಿಟ್ಟುಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಶಾಂತಿ ಕದಡುವ ಷಡ್ಯಂತ್ರ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯ ದಿನ ಐತಿಹಾಸಿಕ ದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಕಪ್ಪುಚುಕ್ಕೆ ಇಲ್ಲದ ರಾಜಕೀಯ ಸೇವೆ ಮತ್ತು ಆಡಳಿತಕ್ಕೆ ದೇಶ ಸಾಕ್ಷಿಯಾಗಿದೆ ಎಂದರು.
ಸ್ವಾವಲಂಬಿ ಭಾರತ ನಿರ್ಮಾಣ ಹಾಗೂ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರಧಾನಿಯವರ ಸಂಕಲ್ಪ ಸಾಕಾರಗೊಳ್ಳುತ್ತಿರುವುದನ್ನು ದೇಶ ನೋಡುತ್ತಿದೆ. ಇದನ್ನು ಸಹಿಸಲಾಗದೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಎಸ್ಐಆರ್ ವಿಚಾರವನ್ನು ಮುಂದಿಟ್ಟುಕೊಂಡು ಸಂವಿಧಾನಿಕ ಸಂಸ್ಥೆಗಳ ಮೇಲೆ ನಿರಾಧಾರ ಆರೋಪಗಳನ್ನು ಮಾಡಲಾಗುತ್ತಿದೆ. ಸಂವಿಧಾನಿಕ ಸಂಸ್ಥೆಗಳನ್ನು ಪ್ರಶ್ನಿಸುವ ಮೂಲಕ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ. ರಾಹುಲ್ ಗಾಂಧಿ ಮತ್ತು ಡಿ.ಕೆ. ಶಿವಕುಮಾರ್ ಅವರ ಗುರಿ ಪ್ರಧಾನಿ ನರೇಂದ್ರ ಮೋದಿ ಅವರೇ ಎಂದು ಅವರು ಆರೋಪಿಸಿದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ, ನೂರು ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಏನು ಕಡಿದು ಕಟ್ಟಿಹಾಕಿದ್ದಾರೆ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿಗಳು ತಮನ್ನು ಪ್ರಜಾಸೇವಕ ಎಂದು ಹೇಳಿಕೊಳ್ಳುತ್ತಾರೆ. ಆದರೆ ರಾಜ್ಯ ಬರಗಾಲ ಎದುರಿಸುತ್ತಿರುವ ಸಂದರ್ಭದಲ್ಲಿ ರೈತರಿಗೆ ಸಮರ್ಪಕ ಪರಿಹಾರ ನೀಡಬೇಕೆಂಬ ಕನಿಷ್ಠ ಕಾಳಜಿಯೂ ಸರ್ಕಾರಕ್ಕೆ ಇಲ್ಲ. ರೈತರಿಗೆ 2,500 ಪರಿಹಾರ ನೀಡುವುದಾಗಿ ಹೇಳುವುದು ಬಡವರಿಗೆ ಭಿಕ್ಷೆ ನೀಡಿದಂತೆ ಎಂದು ಅವರು ಟೀಕಿಸಿದರು.ಡಿ.ಕೆ.ಶಿವಕುಮಾರ್ ಅವರಿಗೆ ರಿಯಲ್ ಎಸ್ಟೇಟ್ ಬಗ್ಗೆ ಇರುವ ಕಾಳಜಿ ಜನರ ಬಗ್ಗೆ ಇಲ್ಲ. ರಿಯಲ್ ಎಸ್ಟೇಟ್ ವಿಚಾರದಲ್ಲಿ ಅವರು ಎಕ್್ಸಪರ್ಟ್. ಕಸದಿಂದ ರಸ ತೆಗೆಯುವಲ್ಲಿ ಅವರು ಬುದ್ಧಿವಂತರುೞೞ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು.
ಸರ್ಕಾರದ ಬಹುತೇಕ ಯೋಜನೆಗಳು ಘೋಷಣೆ ಮತ್ತು ಪ್ರಚಾರಕ್ಕೆ ಸೀಮಿತವಾಗಿವೆ. ಮುಖ್ಯಮಂತ್ರಿ ಬೆಂಗಳೂರಿಗಷ್ಟೇ ಸೀಮಿತವಾಗಿದ್ದಾರೆ ಎಂಬ ಭಾವನೆ ಜನರಲ್ಲಿ ಮೂಡಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಅವರಿಗೆ ಬರೆಯಲಾಗಿರುವ ಪತ್ರವೇ ಸರ್ಕಾರದ ಆರ್ಥಿಕ ನಿರ್ವಹಣೆಗೆ ಕೈಗನ್ನಡಿ ಎಂದು ಹೇಳಿದರು.
ರಿಂಗ್ರೋಡ್ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆ: ಆರೋಪ
ಉತ್ತರ ಕರ್ನಾಟಕದ ನೀರಾವರಿ ಮತ್ತು ಅಭಿವೃದ್ಧಿ ಯೋಜನೆಗಳಾದ ಯುಕೆಪಿ ಮತ್ತಿತರ ಪ್ರಮುಖ ಯೋಜನೆಗಳಿಗೆ ಆದ್ಯತೆ ನೀಡುವ ಬದಲು ಎಲ್ಲ ತಾಲೂಕುಗಳಲ್ಲೂ ರಿಂಗ್ರೋಡ್ ಮಾಡುವ ಘೋಷಣೆ ಮಾಡಲಾಗುತ್ತಿದೆ. ವಿಶ್ವಬ್ಯಾಂಕ್ನಿಂದ ಸಾಲ ಪಡೆದು ರಿಂಗ್ರೋಡ್ಗಳನ್ನು ನಿರ್ಮಿಸುವ ಯೋಜನೆಯ ಹಿಂದೆ ರಿಯಲ್ ಎಸ್ಟೇಟ್ ಹಿತಾಸಕ್ತಿ ಇದೆ ಎಂದು ವಿಜಯೇಂದ್ರ ಆರೋಪಿಸಿದರು.
ಸಚಿವರಿಗೆ ಸ್ಟಿಂಗ್ ಆಪರೇಷನ್ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಸ್ಟಿಂಗ್ ಆಪರೇಷನ್ ಯಾರು ಮಾಡಿದ್ದರು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದರು. ತಮದೇ ಶಾಸಕರ ಮೇಲೆ ಸ್ಟಿಂಗ್ ಮಾಡಿಸುತ್ತಾರೆಯೇ? ಡಿಂಗ್ ಆಪರೇಷನ್ ಯಾರು ಮಾಡಿದ್ದಾರೆ ಎಂಬುದೂ ಜನರಿಗೆ ಗೊತ್ತಿದೆೞೞ ಎಂದು ವ್ಯಂಗ್ಯವಾಡಿದರು.
ಎಸ್ಐಆರ್ ವಿಚಾರದಲ್ಲಿ ರಾಹುಲ್ ಗಾಂಧಿ ಅವರು ವಿವಿಧ ಪಕ್ಷಗಳು ಮತ್ತು ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಪ್ರತಿಭಟನೆ ನಡೆಸುತ್ತಿರುವುದನ್ನು ಟೀಕಿಸಿದ ವಿಜಯೇಂದ್ರ, ತಮೊಬ್ಬರ ಕೈಯಲ್ಲೇ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದು ಗೊತ್ತಾಗಿರುವುದರಿಂದ ಎಲ್ಲರನ್ನೂ ಸೇರಿಸಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಕೆಎಸ್ಆರ್ಟಿಸಿ ಆರ್ಥಿಕ ಸಂಕಷ್ಟಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದಾರೆ. ಸರ್ಕಾರದಿಂದ ಸುಮಾರು 6,500 ಕೋಟಿ ಬಾಕಿ ಉಳಿದಿದೆ. ಸಾರಿಗೆ ಸಂಸ್ಥೆಯ ಕಾರ್ಮಿಕರು, ಕ್ಲೀನರ್ಗಳು ಸೇರಿದಂತೆ ಸಿಬ್ಬಂದಿಗೆ ವೇತನ ನೀಡಲು ಸರ್ಕಾರಕ್ಕೆ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.
