ಕೊಪ್ಪಳ, ಅ.8- ರಾಜ್ಯದಲ್ಲಿ ಬರ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ರೈತರು ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರನ್ನು ಉಳಿಸಿಕೊಳ್ಳುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಅಗತ್ಯ ಬಿದ್ದರೆ ಸಾಲ ತಗೊಂಡಾದರೂ ರೈತರಿಗೆ ನೆರವು ನೀಡುತ್ತೇವೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ ಭರವಸೆ ನೀಡಿದರು.
ಅವರು ಇಂದು ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದ ರೈತರ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲ ಮರುಪಾವತಿಗೆ ಐದು ವರ್ಷಗಳ ಕಾಲಾವಕಾಶ ನೀಡುವ ಕುರಿತು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ರೈತರು ಸಾಲ ಮರುಪಾವತಿ ಮಾಡದಿದ್ದರೂ ಪರವಾಗಿಲ್ಲ. ಸಾಲದ ಮೇಲಿನ ಬಡ್ಡಿ ಸೇರಿದಂತೆ ಸಂಬಂಧಿತ ಜವಾಬ್ದಾರಿಗಳನ್ನು ಸರ್ಕಾರವೇ ನೋಡಿಕೊಳ್ಳಲಿದೆ ಎಂದು ಬ್ಯಾಂಕ್‌ಗಳಿಗೆ ತಿಳಿಸಲಾಗಿದೆ ಎಂದರು.
ರಾಜ್ಯದ 240 ತಾಲ್ಲೂಕುಗಳ ಪೈಕಿ ಈಗಾಗಲೇ 217 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬರದ ತೀವ್ರತೆ ಮೈಸೂರು ಭಾಗಕ್ಕಿಂತ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯ ಮಾನದಂಡದ ಪ್ರಕಾರ ರೈತರಿಗೆ ಒಟ್ಟು 8,500 ರೂ. ಪರಿಹಾರ ದೊರೆಯಬೇಕಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು ಸೇರಿರುತ್ತದೆ. ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಪರಿಹಾರ ನೀಡಬೇಕಿದೆ. ಪ್ರತಿ ರೈತರಿಗೆ 2,500 ರೂ.ನೀಡಲು ಸರ್ಕಾರ ಈಗಾಗಲೇ 1,250 ಕೋಟಿ ರೂ. ವೆಚ್ಚ ಮಾಡಿದೆ. ಈ ಮೊತ್ತ ರೈತರ ಸಂಕಷ್ಟಕ್ಕೆ ಸಾಕಾಗುವುದಿಲ್ಲ ಎಂಬುದನ್ನು ಒಪ್ಪಿಕೊಳ್ಳುತ್ತೇವೆ. ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಿರುವುದು ಸರ್ಕಾರದ ಜವಾಬ್ದಾರಿಯ ಭಾಗವಾಗಿದೆ ಎಂದರು.
ರಾಜ್ಯದಲ್ಲಿ ಇದುವರೆಗೆ ಸುಮಾರು 46,000 ಕೋಟಿ ರೂ. ಬೆಳೆ ನಷ್ಟ ಸಂಭವಿಸಿರುವ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಅಂತಿಮ ಮನವಿ ಸಲ್ಲಿಸುವ ವೇಳೆಗೆ ನಷ್ಟವು 60,000 ಕೋಟಿಯವರೆಗೆ ತಲುಪಿದರೆ, ಸುಮಾರು 18,000ರಿಂದ 20,000 ಕೋಟಿ ಪರಿಹಾರ ಕೇಳುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರ ಎಷ್ಟು ನೆರವು ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ರಾಜ್ಯದ ಸಂಸದರು ಪಕ್ಷಾತೀತವಾಗಿ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಇದು ರಾಜಕೀಯ ಮಾಡುವ ಸಮಯವಲ್ಲ, ರೈತರ ಜೊತೆ ನಿಲ್ಲಬೇಕಾದ ಸಮಯ ಎಂದು ಅವರು ತಿಳಿಸಿದರು.
ಬೆಳೆ ವಿಮೆ ತ್ವರಿತ ಪಾವತಿಗೆ ಕ್ರಮ:
ಬರದಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ಬೆಳೆ ವಿಮೆಯ ಹಣವನ್ನು ಶೀಘ್ರವಾಗಿ ತಲುಪಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೆಕ್ಕೆಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗಿದ್ದು, ಈಗ ಬೆಲೆಯ ಕೊರತೆ ಮತ್ತು ಇಳುವರಿ ಕುಸಿತದಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.
