ನವದೆಹಲಿ,ಅ.10- ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಕುರಿತು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ವಿರೋಧ ಪಕ್ಷಗಳು ತಮ ಪ್ರತಿಭಟನೆಯನ್ನು ತೀವ್ರಗೊಳಿಸಿವೆ. ಈ ನಡುವೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ಕುಮಾರ್ ಹಾಗೂ ಪ್ರಸ್ತುತ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರನ್ನು ಉದ್ದೇಶಿಸಿ ಮಾತನಾಡಿದ್ದ ವೀಡಿಯೊ ತುಣುಕೊಂದನ್ನು ಎಕ್್ಸನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, ಜ್ಞಾನೇಶ್ಕುಮಾರ್ ಹೋಗಲಿದ್ದಾರೆ, ಈ ಸರ್ಕಾರವೂ ಹೋಗಲಿದೆ. ತದನಂತರ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸಲಾಗುವುದು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಜಿರಳೆ ಜನತಾ ಪಕ್ಷ ನವದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದು, ರಾಜಧಾನಿಯಲ್ಲಿ ಭಾರಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ
ಪ್ರತಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಅವರು ವಿದೇಶಿ ಯಜಮಾನರ ಸೂಚನೆಯಂತೆ ದೇಶದಲ್ಲಿ ಅಶಾಂತಿ ಮತ್ತು ಅರಾಜಕತೆಯನ್ನು ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತವು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವುದನ್ನು ಅರಗಿಸಿಕೊಳ್ಳಲು ಇಂಡಿಯಾ ಮೈತ್ರಿಕೂಟಕ್ಕೆ ಸಾಧ್ಯವಾಗುತ್ತಿಲ್ಲ. ದೇಶ ಹಾಗೂ 140 ಕೋಟಿ ಜನರನ್ನು ಅಸ್ಥಿರಗೊಳಿಸಲು ಎರಡು ಅರಾಜಕ ಗುಂಪುಗಳು ಯತ್ನಿಸುತ್ತಿವೆ.
ಪ್ರಜಾಪ್ರಭುತ್ವದ ಹೆಸರಿನಲ್ಲಿ ಅರಾಜಕತೆ ಹರಡಲು ಯತ್ನಿಸುವವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ, ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾನ್ಯ ಸ್ಥಿತಿಯನ್ನು ಕಾಯ್ದುಕೊಳ್ಳಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ದೆಹಲಿ ಪೊಲೀಸರು ರಾಜಧಾನಿಯಾದ್ಯಂತ ಭದ್ರತೆಯನ್ನು ಹೆಚ್ಚಿಸಿದೆ.
