ನವದೆಹಲಿ, ಅ.10- ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ. ಲೋಧಿ ಎಸ್ಟೇಟ್ನಲ್ಲಿರುವ ಅವರ ನಿವಾಸದ ಹೊರಗೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದು, ಈ ಘಟನೆಯನ್ನು ಆಮ್ ಆದ್ಮಿ ಪಕ್ಷದ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.
ಕೇಜ್ರಿವಾಲ್ ಅವರು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ, ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಜಾ ಅವರೊಂದಿಗೆ ಬಸ್ನಲ್ಲಿರುವುದು ಕಂಡುಬಂದಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಬೆಂಬಲ ನೀಡುವಂತೆ ಅವರು ಮನವಿ ಮಾಡಿದ್ದಾರೆ.
ಈ ಹಿಂದೆ ಕೇಂದ್ರ ಸರ್ಕಾರವು ದೆಹಲಿಯ ಮಧ್ಯಭಾಗದಲ್ಲಿ ಪ್ರತಿಭಟನೆ ತಡೆಯಲು ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ರೀತಿಯಲ್ಲಿ ಭದ್ರತಾ ನಿರ್ಬಂಧಗಳನ್ನು ವಿಧಿಸಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದರು. ಪಕ್ಷದ ಪ್ರಮುಖ ನಾಯಕರನ್ನು ವಶಕ್ಕೆ ಪಡೆದಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.
ಆಮ್ ಆದ್ಮಿ ಪಕ್ಷದ ಹಿರಿಯ ನಾಯಕಿ ಅತಿಶಿ ಮರ್ಲೇನಾ ಈ ಕುರಿತು ಎಕ್ಸ್ನಲ್ಲಿ ಪ್ರತಿಕ್ರಿಯಿಸಿ, “ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಕ್ಕಾಗಿ ದೆಹಲಿಯ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದಿದ್ದಾರೆ. ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸಲು ಪ್ರಧಾನಿ ಮೋದಿ ಅವರೇ, ಇನ್ನೆಷ್ಟು ಜನರನ್ನು ಜೈಲಿಗೆ ಹಾಕುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.
ಮತಗಳ್ಳತನದ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ತಾವು ಹಾಗೂ ತಮ್ಮ ಕುಟುಂಬದವರು ಭಾಗವಹಿಸಲಿದ್ದಾರೆ ಎಂದು ಕೇಜ್ರಿವಾಲ್ ಶುಕ್ರವಾರ ತಿಳಿಸಿದ್ದರು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆಯೂ ಕರೆ ನೀಡಿದ್ದರು.
ಶನಿವಾರ ಬೆಳಗ್ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಘಟನೆಗೆ ಪ್ರತಿಕ್ರಿಯಿಸಿದ್ದ ಕೇಜ್ರಿವಾಲ್, ಹಾರುವ ಜಿರಳೆಗಳನ್ನು ಹಿಡಿಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಯವನ್ನು ತೋರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದರು.
