ಬೆಂಗಳೂರು,ಅ.12- ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಬೈಕ್‌ನಲ್ಲಿ ಹೋಗುತ್ತಿದ್ದಾಗ ಅತಿ ವೇಗವಾಗಿ ಬಂದ ಗೂಡ್‌್ಸ ವಾಹನ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಬಿಜಾಪುರ ಮೂಲದ ರೋಹಿತ್ (20) ಮೃತಪಟ್ಟ ವಿದ್ಯಾರ್ಥಿ. ಬೈಕ್ ಚಾಲನೆ ಮಾಡುತ್ತಿದ್ದ ಹರ್ಷ (20) ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದ ಇವರಿಬ್ಬರು ಸ್ನೇಹಿತರು ಹಾಗೂ ಒಂದೇ ಊರಿನವರು. ಇವರು ಬೆಂಗಳೂರಿನ ವಿಜಯನಗರದಲ್ಲಿ ರೂಮ್ ಮಾಡಿಕೊಂಡಿದ್ದರು.
ವಿದ್ಯಾಭ್ಯಾಸದ ಜೊತೆಗೆ ಇವರಿಬ್ಬರು ಪೋರ್ಟಲ್‌ನಲ್ಲಿ ಪಾರ್ಟ್‌ಟೈಮ್ ಕೆಲಸ ಮಾಡುತ್ತಿದ್ದರು. ಇದೇ ಕೆಲಸದ ಮೇಲೆ ಹೋಗಿದ್ದ ಇವರು ಇಂದು ಬೆಳಗಿನ ಜಾವ 3.45 ರ ಸುಮಾರಿನಲ್ಲಿ ಬೈಕ್‌ನಲ್ಲಿ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಬರುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಇಬ್ಬರೂ ಕೆಳಗೆ ಬಿದ್ದಿದ್ದು, ಹಿಂಬದಿ ಕುಳಿತಿದ್ದ ರೋಹಿತ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
